ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿಗೆ ಬರಲಿದ್ದು, 3ದಿನ ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಮಧ್ಯಾಹ್ನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ, ಬಳಿಕ ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದಲ್ಲಿರುವ ಕಣ್ಣಿನ ಆಸ್ಪತ್ರೆ ಉದ್ಘಾಟನೆ, ಸಂಜೆ ಏಳು ಗಂಟೆಗೆ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ರಾಜ್ಯ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಾಗೂ ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೂಡ ಭಾಗಿಯಾಗಲಿದ್ದಾರೆ. ಸಮಾರಂಭಕ್ಕೆ ಈಗಾಗಲೇ ತಯಾರಿ ನಡೆಸುತ್ತಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ಹೆಚ್.ಸಿ ಮಹದೇವಪ್ಪ ಮೈಸೂರಿನಲ್ಲೇ ಬೀಡು ಬಿಟ್ಟಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಭಾಗಿಯಾಗಲಿದ್ದು, ಇಂದು ಸಂಜೆ ಮೈಸೂರಿಗೆ ಬರಲಿದ್ದಾರೆ. ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದ ಬಗ್ಗೆ ಶಾಸಕರು ಮತ್ತು ಸಚಿವರ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ.