ರಾಜ್ಯಪಾಲರ ವಿರುದ್ಧ ಗರಂ ಆದ ಸಿಎಂ ಸಿದ್ದು: ತನಿಖೆಗೆ ಅನುಮತಿ ಪ್ರಶ್ನಿಸಿ ಇಂದು ‘ಹೈ’ ಮೊರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಿದ್ದೆಗೆಡುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿಂದು ಅರ್ಜಿ ಸಲ್ಲಿಸಲಿದ್ದಾರೆ. ಇಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿರುವ ಸಿಎಂ ಪರ ವಕೀಲರು, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರ ಎಂದು ವಾದ ಮಂಡಿಸಲಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 17ಎ ಅಡಿ ಪ್ರಾಸಿಕ್ಯೂಷನ್ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಅಲ್ಲದೇ, ಪ್ರಾಸಿಕ್ಯೂಷನ್‌ ನೀಡುವ ಬಗ್ಗೆ 2021ರ ಸೆಪ್ಟಂಬರ್‌ನಲ್ಲಿ ಕೇಂದ್ರ ಸರ್ಕಾರವೇ ಚೆಕ್‌ಲಿಸ್ಟ್ ನೀಡಿದೆ. ಆ ಚೆಕ್‌ಲಿಸ್ಟ್ ಕೂಡಾ ಪಾಲನೆಯಾಗಿಲ್ಲ. ಇನ್ನು ಡಿಜಿ-ಐಜಿಪಿ ಮಟ್ಟದ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಬೇಕು. ಅನುಮತಿ ಕೇಳಲು ತನಿಖಾ ವರದಿ ಇರಬೇಕು. ಆದರೆ, ಇಲ್ಲಿ ತನಿಖಾ ವರದಿಯೂ ಇಲ್ಲ, ಅಧಿಕಾರಿಗಳೂ ಇಲ್ಲ. ಖಾಸಗಿ ವ್ಯಕ್ತಿಗಳ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ನೀಡಿದ್ದಾರೆ. ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!