ಹೊಸದಿಗಂತ ಕಲಬುರಗಿ
ಆರೋಗ್ಯ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಯಾದಗಿರಿ ಜಿಲ್ಲಾಡಳಿತ ವತಿಯಿಂದ ಇದೇ ಜೂ.14ರಂದು ಯಾದಗಿರಿಯಲ್ಲಿ 440 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು.
ನಗರದ ಕೆಕೆಆರಡಿಬಿ ಮಂಡಳಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 440 ಕೋಟಿ ವೆಚ್ಚದ ವಿವಿಧ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು ,ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗೂಂಡುರಾವ್, ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪಾ ದರ್ಶನಾಪುರ ಅವರು ಸೇರಿ ಕಲ್ಯಾಣ ಕರ್ನಾಟಕದ ಎಲ್ಲಾ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಪುಟದ ನಿರ್ಣಯದಂತೆ, ಅನುದಾನ ಬಳಕೆ
ಕಳೆದ ಸೆ.೧೭ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಆರೋಗ್ಯ ಕ್ಷೇತ್ರಕ್ಕೆ ಸುಮಾರು 873 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿತ್ತು. ಅದರಲ್ಲಿ ಕೆಕಆರ್ಡಿಬಿ ವತಿಯಿಂದ 416 ಕೋಟಿ ರೂಪಾಯಿ ಅನುದಾನ ನೀಡುವ ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಮೊದಲ ಹಂತದಲ್ಲಿ 208 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಲ್ಲಾ 41 ಕ್ಷೇತ್ರಗಳಲ್ಲೂ ಆರೋಗ್ಯ ಆವಿಷ್ಕಾರದ ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರ ಹಾಗೂ ಅನೇಕ ಆರೋಗ್ಯ ಕೇಂದ್ರಗಳನ್ನು ಮೇಲ್ದೇರ್ಜೆ ಏರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ತಿಳಿಸಿದರು.