ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದು ಆರು ದಿನಗಳಾಗಿವೆ. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ಬೆಳಗಾವಿಯ ಸೇನಾ ತುಕಡಿಯೂ ಸಹಾಯಕ್ಕೆ ಧಾವಿಸಿದೆ. ಇಂದು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ದುರಂತದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಸಂಗ್ರಹಿಸಿದ್ದೇನೆ. ಸದ್ಯಕ್ಕೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ, ಆಧುನಿಕ ಲೋಹ ಶೋಧಕಗಳು ಮತ್ತು ಜೆಸಿಬಿಗಳನ್ನು ಬಳಸಿ ಕಾರ್ಯಾಚರಣೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದರು. ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಗುಡ್ಡ ಕುಸಿದಿರುವ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅವರ ಪ್ರಕಾರ, ಕಾರ್ಯಾಚರಣೆ ಪೂರ್ಣಗೊಂಡ ನಂತರ, ತನಿಖೆ ನಡೆಸಿ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.