ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕಂಟಕ ತಪ್ಪಿಲ್ಲ. ಒಂದೆಡೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
ಈ ಸಂಬಂಧ ಇದೀಗ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಕಡತ ನಾಶಪಡಿಸಿರುವ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಅವರು ಬರೆದಿದ್ದ ಮೂಲ ಪತ್ರವನ್ನು ನಾಶಪಡಿಸಿ ಹೊಸದಾಗಿ ರಚಿಸಿದ ಪತ್ರವನ್ನು ಕಡತಗಳಿಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತು ಅವರ ಸಹಚರರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.