ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಚುನಾವಣೆಯಲ್ಲಿ ಅತಂತ್ರ ಜನಾದೇಶದಿಂದ ರಾಜಕೀಯ ಅನಿಶ್ಚಿತತೆ ಉಂಟಾಗಿದ್ದು, ಇದೀಗ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ನಡುವಣ ಮಾತುಕತೆ ಫಲಪ್ರದವಾಗಿದ್ದು, ಉಭಯ ಪಕ್ಷಗಳು ಸಮ್ಮಿಶ್ರ ಸರ್ಕಾರ ರಚನೆಯ ಅಧಿಕಾರ ಹಂಚಿಕೆಯ ಒಪ್ಪಂದಕ್ಕೆ ಸಮ್ಮತಿಸಿವೆ.
ಮಂಗಳವಾರ ತಡರಾತ್ರಿ ಜರ್ದಾರಿ ಹೌಸ್‌ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ-ಜರ್ದಾರಿ ಅವರು, ‘ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ (72) ಅವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ನಡೆಸಲಿದ್ದಾರೆ’ ಎಂದು ಘೋಷಿಸಿದರು.
ಅದೇ ರೀತಿ ಪಿಪಿಪಿ ಸಹ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ (68) ಅವರು ಅಧ್ಯಕ್ಷ ಗಾದಿಗೆ ಜಂಟಿ ಅಭ್ಯರ್ಥಿಯಾಗಲಿದ್ದಾರೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಲಾವಲ್, ‘ಪಿಪಿಪಿ ಮತ್ತು ಪಿಎಂಎಲ್-ಎನ್ ಬಹುಮತಕ್ಕೆ ಅಗತ್ಯವಿರುವ ಸಂಖ್ಯಾಬಲವನ್ನು ಸಾಧಿಸಿವೆ. ನಾವು ಈಗ ಸರ್ಕಾರ ರಚಿಸುವ ಸ್ಥಿತಿಯಲ್ಲಿದ್ದೇವೆ. ಈ ರಾಜಕೀಯ ಮೈತ್ರಿಯು ದೇಶದ ಅರ್ಥ ವ್ಯವಸ್ಥೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ’ ಎಂದು ಹೇಳಿದರು.
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಮತ್ತು ಸುನ್ನಿ ಇತ್ತೆಹಾದ್ ಕೌನ್ಸಿಲ್ (ಎಸ್‌ಐಸಿ) ಕೇಂದ್ರದಲ್ಲಿ ಸರ್ಕಾರ ರಚನೆಗಾಗಿ ಸಂಸತ್ತಿನಲ್ಲಿ ಸರಳ ಬಹುಮತ ಸಾಧಿಸಲು ವಿಫಲವಾಗಿದೆ ಎಂದು ಅವರು ಹೇಳಿದರು.