ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡದಲ್ಲಿ ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಗಾಳಿಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, 20.45 ಸೆಂ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ.ಇನ್ನು ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಅರಕಲಗೂಡನಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹಠಾತ್ತನೆ ಹಿಡಿದ ಮಳೆಯಿಂದಾಗಿ ಭತ್ತದ ಕೃಷಿ ಚಟುವಟಿಕೆಗೆ ತೀವ್ರ ಹಿನ್ನಡೆಯಾಗಿದೆ.