ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೇ 22ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದ್ದು, ಅದರಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಬಂಟ್ವಾಳ ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದ್ದು, ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಹಾನಿ ಕಷ್ಟನಷ್ಟ ಉಂಟಾಗಿದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ಸೂಚಿಸಲಾಗಿದೆ.
ಸೋಮವಾರ ಬೆಳಗ್ಗೆ ಮಲ್ಪೆ ಕಡಲ ತೀರದಲ್ಲಿ ಉತ್ತಮ ಮಳೆಯಾಗಿದ್ದು. ಆದಿ ಉಡುಪಿ, ಬನ್ನಂಜೆಯವರೆಗೂ ಮಳೆ ಸುರಿದಿದೆ, ಸಂಜೆ ಮೋಡಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.
ಇನ್ನು ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ತಡರಾತ್ರಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ವಾಯುಭಾರ ಕುಸಿತದಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಮೀನುಗಾರಿಕೆಗೆ ಹೋಗದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.