March 14, 2026
Saturday, March 14, 2026
spot_img

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಳ: ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ಬಂಗಾಳಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಶ್ರೀಲಂಕಾದಲ್ಲಿ ಇಂದು ಬೆಳಗ್ಗೆ ಕಡಿಮೆ ಒತ್ತಡದ ಪ್ರದೇಶವು ಮುಂದುವರಿದಿತ್ತು. ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯೂ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಇದು ನಿಧಾನವಾಗಿ ಪಶ್ಚಿಮ-ವಾಯುವ್ಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಆಗ್ನೇಯ ಅರಬ್ಬು ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ. ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ.18ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ.

ನ.19ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನ.20ರಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲೂ ಇದೇ ರೀತಿಯ ಸ್ಥಿತಿ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ನ.21ರಂದು ಕೂಡ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಣಹವೆ ಇರುವ ಸಾಧ್ಯತೆ ಇದೆ. ‌

ನ. 22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !