ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಚಳಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ. ವಿಶೇಷವಾಗಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕನಿಷ್ಠ ತಾಪಮಾನ ದಾವಣಗೆರೆಯಲ್ಲಿ ದಾಖಲಾಗಿದ್ದು, ಉಷ್ಣಾಂಶ 8 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಮುಂಜಾನೆಯ ಮೈಕೊರೆಯುವ ಚಳಿಯಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಸ್ವೆಟರ್, ಶಾಲು ಹಾಗೂ ಬೆಚ್ಚನೆಯ ಉಡುಪುಗಳ ಮೊರೆ ಹೋಗುತ್ತಿದ್ದಾರೆ.
ಸದ್ಯಕ್ಕೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ. ಮುಂದಿನ ಎರಡು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಆ ಬಳಿಕ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಕೊರೆಯುವ ಚಳಿಯ ನಡುವೆಯೇ ರಾಜ್ಯಕ್ಕೆ ಮಳೆಯ ಮುನ್ಸೂಚನೆಯೂ ಸಿಕ್ಕಿದೆ. ನವೆಂಬರ್ 23ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ನವೆಂಬರ್ 24ರಿಂದ 27ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನದ ಈ ದಿಢೀರ್ ಬದಲಾವಣೆಯಿಂದಾಗಿ ಚಳಿ ಮತ್ತು ಮಳೆ ಎರಡನ್ನೂ ಎದುರಿಸಲು ಜನತೆ ಸಜ್ಜಾಗಬೇಕಿದ್ದು, ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.



