ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಡಿಕೇರಿ:
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ವಿದ್ಯಾರ್ಥಿಗಳ
ವಿದ್ಯಾಭ್ಯಾಸಕ್ಕೆ ಹಿನ್ನೆಡೆಯಾಗಿದ್ದು, ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದ್ದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಲಸಿಕೆಯನ್ನು ಎಲ್ಲೆಲ್ಲಿ ನೀಡಲಾಗುತ್ತಿದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮುಂಚಿತವಾಗಿಯೇ ಮಾಹಿತಿ ದೊರೆಯುವಂತಾಗಬೇಕು. ಈ ಸಂಬಂಧ ಪತ್ರಿಕೆಗಳಲ್ಲಿ ಮತ್ತು ಆಕಾಶವಾಣಿಯಲ್ಲಿ ಪ್ರಕಟಣೆ ನೀಡಬೇಕು ಹಾಗೂ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅವರು ಸೂಚಿಸಿದರು.
ಜುಲೈ 19 ಮತ್ತು 22 ರಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿರುವುದರಿಂದ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿಗಳು ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು. ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಮುಂಚೆ ಮತ್ತು ನಂತರ ಸ್ಯಾನಿಟೈಸರ್ ಮಾಡಿಸಬೇಕು ಎಂದು ಸಂಸದರು ಸೂಚನೆ ನೀಡಿದರು.
ವೀರಾಜಪೇಟೆ ಆಸ್ಪತ್ರೆಯಲ್ಲಿ ನಿರ್ಮಿಸಲಾಗಿರುವ ಆಕ್ಸಿಜನ್ ಪ್ಲಾಂಟ್ ಕಾರ್ಯಾರಂಭ ಮಾಡಲು ಆದಷ್ಟು ಬೇಗ ಜನರೇಟರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ತಿಳಿಸಿದರು.
ಸಂಸದರ ನಿಧಿಯಲ್ಲಿ 2.20 ಕೋಟಿ ರೂ. ಅನುದಾನವಿದ್ದು, ಜಿಲ್ಲೆಯ ಆಸ್ಪತ್ರೆಗೆ ಅವಶ್ಯಕವಿರುವ ಉಪಕರಣಗಳನ್ನು ಖರೀದಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸದರ ನಿಧಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಅನುದಾನದ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ತಿಂಗಳಿಗೊಮ್ಮೆಯಾದರೂ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಅವರು ತಿಳಿಸಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ, ಮೊದಲನೇ ಕೋವಿಡ್ ಲಸಿಕೆ ಪಡೆದವರು ಎರಡನೇ ಡೋಸ್ ಲಸಿಕೆ ಸಿಗುತ್ತಿಲ್ಲ ಎಂದು ದೂರು ಸಲ್ಲಿಸುತ್ತಿದ್ದು, ಈ ಸಂಬಂಧ ಮೊದಲನೇ ಡೋಸ್ ಲಸಿಕೆ ಪಡೆದವರಿಗೆ ಆದ್ಯತೆ ಮೇರೆಗೆ 2ನೇ ಡೋಸ್ ಲಸಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೆಗೆಟಿವ್ ವರದಿ ಕಡ್ಡಾಯ : ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಬೇಕು. ಅಕ್ರಮವಾಗಿ ಜಿಲ್ಲೆಯನ್ನು ಪ್ರವೇಶಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಂಸದರ ನಿಧಿ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಕೈಗೊಂಡ ಕಾಮಗಾರಿಗಳಿಗೆ ಹಣ ಪಾವತಿಯಾಗಿರುವುದಿಲ್ಲ. ದಾಖಲಾತಿಗಳು ಸರಿಯಾಗಿದ್ದರೆ ತಕ್ಷಣವೇ ಹಣ ಪಾವತಿ ಮಾಡಬೇಕು. ಒಂದು ವೇಳೆ ದಾಖಲಾತಿಗಳು ಸರಿಯಾಗಿ ಇಲ್ಲದಿದ್ದರೆ ಅವರಿಗೆ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಜಿಲ್ಲೆಯ ಆಸ್ಪತ್ರೆಗಳಿಗೆ ಅವಶ್ಯಕವಾಗಿ ಬೇಕಿರುವ ಉಪಕರಣ ಖರೀದಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಅನಾವಶ್ಯಕ ಪ್ರಸ್ತಾವನೆ ಸಲ್ಲಿಸಿ ದುಂದು ವೆಚ್ಚ ಮಾಡಬಾರದು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಚೆಕ್ ಪೋಸ್ಟ್ಗಳ ಮೂಲಕ ಜಿಲ್ಲೆಯನ್ನು ಪ್ರವೇಶಿಸುತ್ತಿರುವ ಕೂಲಿ ಕಾರ್ಮಿಕರಿಗೆ ರ್ಯಾಂಡಮ್ ಆಗಿ ರ್ಯಾಪಿಡ್ ಆಂಟಿಜನ್ ಪರೀಕ್ಷೆ ನಡೆಸಲಾಗುತ್ತಿದೆ. ಹಾಗೂ ಪಾಸಿಟಿವ್ ಬಂದವರಿಗೆ 15 ದಿನಗಳ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ನಾಗರಹೊಳೆ ವನ್ಯಜೀವ ವಿಭಾಗದ ನಿರ್ದೇಶಕ ಮಹೇಶ್ ಕುಮಾರ್, ಜಿ.ಪಂ. ಉಪಕಾರ್ಯದರ್ಶಿ ಲಕ್ಷ್ಮಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಇತರ ಸದಸ್ಯರು ಇದ್ದರು.