July 10, 2026
Friday, July 10, 2026
spot_img

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ : ಅಧ್ಯಕ್ಷ ಯು.ನಿಸಾರ್ ಅಹ್ಮದ್

ಹೊಸದಿಗಂತ ವರದಿ ಚಿತ್ರದುರ್ಗ:

ಸಂವಿಧಾನಬದ್ಧವಾಗಿ ದೇಶದ ಅಲ್ಪಸಂಖ್ಯಾತರಿಗೆ ದೊರೆತಿರುವ ಕಾನೂನಾತ್ಮಕ ಹಕ್ಕುಗಳು ಮತ್ತು ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಹಾಗೂ ಅವರ ಹಿತರಕ್ಷಣೆ ಮಾಡಲು ರಾಜ್ಯ ಅಲ್ಪಸಂಖ್ಯಾತರ ಆಯೋಗವು ಸಂಪೂರ್ಣ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ತಿಳಿಸಿದರು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಆಯೋಗಕ್ಕೆ ಸಿವಿಲ್ ನ್ಯಾಯಾಲಯದ ಮಾದರಿಯ ವಿಶೇಷ ಅಧಿಕಾರಗಳಿದ್ದು, ಅಲ್ಪಸಂಖ್ಯಾತ ಸಮುದಾಯದ ಯಾರಿಗೇ ಆದರೂ ಅನ್ಯಾಯವಾದಲ್ಲಿ ತಕ್ಷಣವೇ ಸಮನ್ಸ್ ಜಾರಿ ಮಾಡುವ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಶಕ್ತಿ ಇದೆ. ಸಮುದಾಯದಲ್ಲಿ ಸೌಹಾರ್ದತೆ ಹೆಚ್ಚಿಸುವುದು, ಶೈಕ್ಷಣಿಕ ಪ್ರಗತಿ, ಮಹಿಳಾ ಸಬಲೀಕರಣ ಹಾಗೂ ಕಾನೂನು ನೆರವು ನೀಡುವುದು ಆಯೋಗದ ಪ್ರಮುಖ ಉದ್ದೇಶಗಳಾಗಿವೆ ಎಂದಿದ್ದಾರೆ.

ಇದಕ್ಕಾಗಿ ಆಯೋಗದಲ್ಲಿ ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರನ್ನೊಳಗೊಂಡ ವಿಶೇಷ ಉಪಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ಸಮುದಾಯದ ಸಮಸ್ಯೆಗಳ ಕುರಿತು ಆಳವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ಸಲ್ಲಿಸಲಿವೆ ಎಂದು ವಿವರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಜುಲೈ 16 ರಂದು ರಾಜ್ಯ ಮಟ್ಟದ ಉನ್ನತ ಸಮಿತಿ ಸಭೆ ನಡೆಯಲಿದ್ದು, ಜಿಲ್ಲಾ ಮಟ್ಟದ ಪ್ರಗತಿ ವರದಿಗಳನ್ನು ಪರಿಶೀಲಿಸಲಾಗುವುದು. ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಗತಿಯ ವರದಿಯನ್ನು ನಿಯಮಿತವಾಗಿ ಸಲ್ಲಿಸಲು ಆದೇಶಿಸಿದರು.

ಇದನ್ನೂ ಓದಿ:

ಕುಟುಂಬಗಳ ಮಾಹಿತಿ ಕ್ರೂಢೀಕರಣಕ್ಕೆ ಸೂಚನೆ:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಎಷ್ಟು ಕುಟುಂಬಗಳು ಇವೆ ಎಂಬ ನಿಖರವಾದ ಸಂಗ್ರಹಿಸಬೇಕು. ಕೇವಲ ಅಂಗನವಾಡಿಗೆ ಬರುವ ಮಕ್ಕಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುವುದಲ್ಲ, ಬದಲಿಗೆ ಸಮಗ್ರ ಕುಟುಂಬಗಳ ಸರ್ವೆ ನಡೆಸುವುದು ಮುಖ್ಯ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕುಟುಂಬಗಳ ಸರ್ವೆ ನಡೆಸಿದಾಗ ಮಾತ್ರ 3 ರಿಂದ 6 ವರ್ಷದೊಳಗಿನ ಎಷ್ಟು ಮಕ್ಕಳಿದ್ದಾರೆ ಎಂಬ ನಿಖರ ಮಾಹಿತಿ ಲಭ್ಯವಾಗುತ್ತದೆ. ಆ ಮೂಲಕ ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕಾಹಾರ ಹಾಗೂ ಸೌಲಭ್ಯಗಳನ್ನು ತಲುಪಿಸಲು ಸಾಧ್ಯವಾಗುತ್ತದೆ. ಈ ಹಿನ್ನಲೆಯಲ್ಲಿ ಕುಟುಂಬಗಳ ವಿವರ ಸಂಗ್ರಹಿಸುವುದು ಅಗತ್ಯವಾಗಿದೆ ಎಂದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರ, ಜಿಲ್ಲಾ ಪಂಚಾಯಿತಿ ಸಿಪಿಓ ಗಾಯತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕ ಪ್ರಸನ್ನ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಖಾ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಲ್ಪಸಂಖ್ಯಾತರ ಆಯೋಗದ ಸದಸ್ಯರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !