ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ನಗರದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ-2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಜನಪದ, ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.
ಈ ವರ್ಷ ಕರ್ನಾಟಕ ಸರ್ಕಾರ 69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಅಥವಾ ಅದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕನ್ನಡ ಮತ್ತು ಸಂಸ್ಕೃತಿ ಸಚಿವರು ಆಯ್ಕೆ ಸಮಿತಿಯ ಮುಖ್ಯಸ್ಥರಾಗಿರುತ್ತಾರೆಂದು ತಿಳಿಸಿದರು.
ರಾಜ್ಯಾದ್ಯಂತ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮಗಳು ನಡೆಯುತ್ತಿವೆ. ಹಂಪಿಯಿಂದ ಆರಂಭವಾದ ಕನ್ನಡ ರಥ ಇದುವರೆಗೆ 28 ಜಿಲ್ಲೆಗಳಲ್ಲಿ ಸಂಚರಿಸಿ, ಇದೀಗ ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.