ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ವಿಳಂಬ: ಕಾಂಗ್ರೆಸ್ ಅಸಮಾಧಾನ

ಹೊಸದಿಗಂತ ವರದಿ ಮಡಿಕೇರಿ:

ಪ್ರತಿ ಮಳೆಗಾಲದಲ್ಲಿ ಜಲಾವೃತಗೊಳ್ಳುವ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಜನರು ಹಾಗೂ ಭಕ್ತರ ಅನುಕೂಲಕ್ಕಾಗಿ ರೂಪಿಸಲಾದ ಮೇಲ್ಸೇತುವೆ ಕಾಮಗಾರಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಪ್ರಮುಖರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವಕ್ತಾರ ಪಿ.ಎಲ್.ಸುರೇಶ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಸುನೀಲ್ ಪತ್ರವೋ ಹಾಗೂ ಮಹಮ್ಮದ್ ಹ್ಯಾರೀಸ್, ಸರ್ಕಾರದ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಆಮೆ‌ ನಡಿಗೆಯಲ್ಲಿ ಸಾಗುತ್ತಿದ್ದು, ಸ್ಥಳೀಯರು ಕಷ್ಟ ಅನುಭವಿಸುವಂತಾಗಿದೆ. ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಮಳೆಯಿಂದ ಕೆಸರುಮಯ ವಾತಾವರಣ ಸೃಷ್ಟಿಯಾಗಿದೆ. ಜನರು ಹಾಗೂ ಭಕ್ತರ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ದೂರಿದರು.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಭಕ್ತರ ಅನುಕೂಲಕ್ಕಾಗಿ ಮೇಲ್ಸೇತುವೆ ಯೋಜನೆಯನ್ನು ರೂಪಿಸಿ ಹಣ ಬಿಡುಗಡೆ ಮಾಡಿಸಿದ್ದರು. ಕಾಮಗಾರಿ ಕೂಡಾ ಆರಂಭಗೊಂಡಿತ್ತಾದರೂ ನಂತರ ಬಂದ ಬಿಜೆಪಿ ನೇತೃತ್ವದ ಸರ್ಕಾರ ಈ ಯೋಜನೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿತು. ಜಿಲ್ಲೆಯ ಶಾಸಕರುಗಳಿಗೆ, ಉಸ್ತುವಾರಿ ಸಚಿವರಿಗೆ ಈ ಯೋಜನೆಯ ಬಗ್ಗೆ ಕಾಳಜಿ ಇಲ್ಲದಾಗಿದೆ. ಇದರ ಪರಿಣಾಮ 5 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಅಲ್ಲದೆ ಜನರು ಹಾಗೂ ಭಕ್ತರು ಇಲ್ಲಿನ ಅವ್ಯವಸ್ಥೆಯಿಂದ ನಿತ್ಯ ಕಷ್ಟ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯರ ಒತ್ತಾಯಕ್ಕೆ ಮಣಿದು ಜೂನ್ ಮೊದಲ ವಾರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ದೊರೆಯಿತಾದರೂ, ಇಲ್ಲಿಯವರೆಗೆ ಕಾಮಗಾರಿ ವೇಗವನ್ನು ಪಡೆದುಕೊಂಡಿಲ್ಲ. ಭಕ್ತರ ಹಿತದೃಷ್ಟಿಯಿಂದ ಉಸ್ತುವಾರಿ ಸಚಿವರು ಹಾಗೂ ಶಾಸಕರು ಹೆಚ್ಚು ಆಸಕ್ತಿ ತೋರಿ ಮೇಲ್ಸೇತುವೆ ಯೋಜನೆಯನ್ನು ಪೂರ್ಣಗೊಳಿಸಲು ಕಾರ್ಯೋನ್ಮುಖರಾಗಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!