Sunday, September 21, 2025

ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದಿಂದ ಹೆಚ್ಚಿನ ಆದ್ಯತೆ : ಸಚಿವ ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ 4 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಗುರುಭವನದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಶೈಕ್ಷಣಿಕ ವರ್ಷದಲ್ಲಿ 800 ಕೆಪಿಎಸ್ ಶಾಲೆಗಳ ನಿರ್ಮಾಣ ಹಾಗೂ 3 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದರು. ಜೊತೆಗೆ, ಒಳಮೀಸಲಾತಿ ಜಾರಿಗೆ ಬಂದಿದ್ದು, ಮುಂದಿನ ಕೆಲವೇ ದಿನಗಳಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಘೋಷಿಸಿದರು.

ಸಚಿವರು ಮುಂದುವರಿದು, “ನಮ್ಮ ಪೀಳಿಗೆಗೆ ನಿಜವಾದ ಕೊಡುಗೆ ನೀಡಬೇಕಾದರೆ ಊರಿನಲ್ಲಿ ದೇವಸ್ಥಾನದ ಗಂಟೆಗಳಿಗಿಂತ ಶಾಲೆಗಳ ಗಂಟೆ ಹೊಡೆಯಬೇಕು. ಉತ್ತಮ ಶಿಕ್ಷಣ ಪಡೆದ ಯುವಕರೇ ಸದೃಢ ದೇಶದ ಆಧಾರ” ಎಂದರು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ನವೆಂಬರ್ 1ರಿಂದ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು, ಧೂಳು ಹಿಡಿದಿದ್ದ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಕ್ಲಾಸ್‌ಗಳು ಮತ್ತೆ ಪ್ರಾರಂಭಗೊಂಡಿವೆ. ಇದರಿಂದ ಬಡವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಿದೆ ಎಂದು ಹೇಳಿದರು.

ಸರ್ಕಾರದ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಾದ್ಯಂತ ಎಲ್ಲ ವಿದ್ಯಾರ್ಥಿಗಳಿಗೆ ಈ ಉಚಿತ ತರಬೇತಿ ವಿಸ್ತರಿಸಲಾಗುವುದು ಎಂದು ಹೇಳಿದರು.

ಸಚಿವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು. ಜೊತೆಗೆ, ಅತ್ಯುತ್ತಮ ಫಲಿತಾಂಶ ತೋರಿದ ಶಾಲೆಗಳಿಗೆ ಪ್ರಥಮ ಬಹುಮಾನ 55 ಸಾವಿರ ರೂ., ದ್ವಿತೀಯ ಬಹುಮಾನ 33 ಸಾವಿರ ರೂ. ಹಾಗೂ ತೃತೀಯ ಬಹುಮಾನ 11 ಸಾವಿರ ರೂ. ನೀಡಲಾಗುವುದು ಎಂದರು.

ಇದನ್ನೂ ಓದಿ