ಹೊಸದಿಗಂತ ವರದಿ ಮೈಸೂರು:
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯವನ್ನು ಸಂಪೂರ್ಣ ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಗುರುವಾರ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಸರ್ಕಾರ ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ಜನರಿಗೆ ತಲುಪಿಸಲು ಆಗದೆ ವಿಫಲವಾಗಿದೆ. ಅಧಿಕಾರಕ್ಕೆ ಬಂದು ೮ ತಿಂಗಳಾದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹೇಳುವ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರು, ರೈತರು ಸೇರಿದಂತೆ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆಂದು ಜಾರಿಗೊಳಿಸಿರುವ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಒಗ್ಗಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಎಲ್ಲಾ ವರ್ಗಗಳ ಜನರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಭಾರತ್ ಬ್ರ್ಯಾಂಡ್ ಯೋಜನೆಯನ್ನು ಜಾರಿಗೊಳಿಸಿದೆ. ಇದು ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಮೀರಿಸುವಂತದ್ದು. ಪ್ರತಿ ಕೆಜಿ ಅಕ್ಕಿಗೆ ೨೯ ರೂಪಾಯಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಈ ಯೋಜನೆ ಬಡವರು,ಮಧ್ಯಮ ವರ್ಗದವರಿಗೆ ಮಾತ್ರ ಸೀಮಿತವಾಗದೆ ಎಲ್ಲಾ ಜನರಿಗೂ ಅನುಕೂಲ ಆಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಹಾಗೂ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿಕೊಟ್ಟ ಪ್ರಧಾನಿ ಮೋದಿ ಅವರಿಗೆ ಪೋಸ್ಟ್ ಕಾರ್ಡ್ ಕಳುಹಿಸುವ ಮೂಲಕ ಅಭಿನಂದನೆ ಸಲ್ಲಿಸುವುದು ಹಾಗೂ ರಾಜ್ಯ ಸರ್ಕಾರದ ಜನ, ದಲಿತ, ರೈತ ವಿರೋಧಿ ನೀತಿ ಖಂಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ , ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ನಿಗಮ ಮಂಡಳಿಗಳ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ,ಕೋಟೆ ಎಂ. ಶಿವಣ್ಣ,ಮಿರ್ಲೆ ಶ್ರೀನಿವಾಸ ಗೌಡ, ಎನ್.ಆರ್.ಕೃಷ್ಣಪ್ಪ ಗೌಡ, ಎಂ. ಅಪ್ಪಣ್ಣ, ಮಾಜಿ ಸಚಿವ ಸಿ.ಎಚ್. ವಿಜಯ ಶಂಕರ್, ಮಾಜಿ ಶಾಸಕರಾದ ತೋಂಟದಾರ್ಯ, ಬಿ. ಹರ್ಷವರ್ಧನ, ಸಿ. ರಮೇಶ್, ಮಾಜಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ಮಳವಾಡಿ ಮಹೇಶ್, ಬಾಲಕೃಷ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್, ಮೈಸೂರು ನಗರಾಧ್ಯಕ್ಷ ಎಲ್. ನಾಗೇಂದ್ರ, ವಿಭಾಗೀಯ ಪ್ರಭಾರಿ ಮೈ.ವಿ. ರವಿಶಂಕರ್, ಮೈಮುಲ್ ಮಾಜಿ ನಿರ್ದೇಶಕ ಎಸ್.ಸಿ. ಅಶೋಕ್ ಮತ್ತಿತರರು ಹಾಜರಿದ್ದರು.