ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡದ ಕಾಂಗ್ರೆಸ್ ದಲಿತ ವಿರೋಧಿ: ಶೈಲೇಂದ್ರ

ಹೊಸದಿಗಂತ ವರದಿ,ಮೈಸೂರು:

ಕಾಂಗ್ರೆಸ್ ಪಕ್ಷದ ಇಲ್ಲಿಯ ತನಕ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡದೆ ವಂಚಿಸುತ್ತಾ ಬಂದಿದೆ. ವೋಟ್ ಬ್ಯಾಂಕ್‌ಗಾಗಿ ದಲಿತರನ್ನು ಬಳಿಸಿಕೊಳ್ಳುತ್ತಿದೆ. ಹಾಗಾಗಿ ಕಾಂಗ್ರೆಸ್ಸೇ ನಿಜವಾದ ದಲಿತ ವಿರೋಧಿಯಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾದ ಮೈಸೂರು ನಗರಾಧ್ಯಕ್ಷ, ನಗರಪಾಲಿಕೆಯ ಮಾಜಿ ಉಪಮೇಯರ್ ಶೈಲೇಂದ್ರ ಆರೋಪಿಸಿದ್ದಾರೆ.

ಭಾನುವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಅತಿಹೆಚ್ಚು ಬಾರಿ ತಿದ್ದುಪಡಿ ಮಾಡಿದ ಕಾಂಗ್ರೆಸ್ ಸಂವಿಧಾನವನ್ನು ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವಮಾನ ಮಾಡಿತು. ಅಲ್ಲದೇ ಅಂಬೇಡ್ಕರ್‌ಅವರು ನಿಧನರಾದಾಗ ಅಂತ್ಯಕ್ರಿಯೆ ನಡೆಸಿ ಜಾಗ ನೀಡದೆ ಅಮಾನವೀಯವಾಗಿ ವರ್ತಿಸಿತು. ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡು, ಅಧಿಕಾರವನ್ನು ಅನುಭವಿಸುತ್ತಿರುವ ಕಾಂಗ್ರೆಸ್ ಇಲ್ಲಿಯ ತನಕ ರಾಜ್ಯದಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡದೆ ಅನ್ಯಾಯ ಮಾಡುತ್ತಲೇ ಬಂದಿದೆ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರಾದವರು ಕಾಂಗ್ರೆಸ್ ಅಧಿಕಾರಕ್ಕೆ ತಂದ ತಕ್ಷಣ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಕೊಂಡು ಬಂದಿರುವುದು ಅಲ್ಲಿನ ವಾಡಿಕೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಮುಂತಾದ ದಲಿತ ನಾಯಕರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡದೆ ಮೋಸ ಮಾಡಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಬಂದಾಗಿನಿoದ ದಲಿತರನ್ನು ತುಳಿಯುತ್ತಲೇ ಬಂದಿದ್ದಾರೆ. ದಲಿತ ನಾಯಕರಿಗೆ ಸಿಗಬೇಕಾದ ಮುಖ್ಯಮಂತ್ರಿ ಸ್ಥಾನವನ್ನು ಅಧಿಕಾರದ ಆಸೆಯಿಂದ ತಪ್ಪಿಸುತ್ತಿದ್ದಾರೆ. ಪಿತೂರಿ ಮಾಡಿ ಮಲ್ಲಿಕಾರ್ಜುನ ಖರ್ಗೆಯವರನ್ನು ಕೇಂದ್ರ ರಾಜಕಾರಣಕ್ಕೆ ಹೋಗುವಂತೆ ಮಾಡಿದರು. ಡಾ.ಜಿ.ಪರಮೇಶ್ವರ್‌ರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದಂತೆ ನೋಡಿಕೊಂಡರು. ಕಂದಾಯ ಸಚಿವರಾಗಿದ್ದ ವಿ.ಶ್ರೀನಿವಾಸ್‌ಪ್ರಸಾದ್‌ರನ್ನು ಏಕಾ ಏಕಿ ಸಚಿವ ಸ್ಥಾನದಿಂದ ತೆಗೆದು ಹಾಕಿ, ಅವರು ಕಾಂಗ್ರೆಸ್ ಪಕ್ಷ ಬಿಡುವಂತೆ ಮಾಡಿದರು. ಬೆಂಗಳೂರಿನ ಡಿಜೆ, ಕೆಜಿ ಹಳ್ಳಿಯಲ್ಲಿ ದಲಿತ ಶಾಸಕರ ಮನೆಗೆ ಬೆಂಕಿ ಹಚ್ಚಿ ಅಟ್ಟಹಾಸ ಮಾಡಿದ ಆರೋಪಿಗಳ ವಿರುದ್ಧ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳಲಿಲ್ಲ. ಈಗ ಬೆಳಗಾವಿಯಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧವೂ ಯಾವುದೇ ಗಂಭೀರವಾದ ಕ್ರಮಗಳನ್ನು ಸಿಎಂ ಸಿದ್ದರಾಮಯ್ಯ ಕೈಗೊಂಡಿಲ್ಲ. ಎಸ್ಸಿ, ಎಸ್ಟಿಗಳ ಅಭಿವೃದ್ಧಿಗೆಂದು ಮೀಸಲಾಗಿದ್ದ ೧೧ ಸಾವಿರ ಕೋಟಿ ರೂ ಅನುದಾನವನ್ನು ಇದೀಗ ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ನಿಜವಾದ ದಲಿತ ವಿರೋಧಿ ಸಿಎಂ ಸಿದ್ದರಾಮಯ್ಯ ವಿನಃ ಬಿಜೆಪಿಯಲ್ಲ. ಸಿದ್ದರಾಮಯ್ಯ ವೋಟ್ ಬ್ಯಾಂಕ್‌ಗಾಗಿ ದಲಿತರನ್ನು ಬಳಿಸಿಕೊಂಡು, ಆ ನಂತರ ದಲಿತರಿಗೆ ಮೋಸ, ವಂಚನೆ ಮಾಡುತ್ತಲೇ ಇದ್ದಾರೆ. ಹೀಗಿದ್ದರೂ ಕೆಲ ದಲಿತ ಸಂಘಟನೆಗಳು, ಸಮುದಾಯದವರು ಸಿಎಂ ಸಿದ್ದರಾಮಯ್ಯನವರ ಪರವಾಗಿ ನಿಂತು ಯಾಕೇ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ, ಕಾಂಗ್ರೆಸ್‌ಗೆ ಯಾಕೇ ಬೆಂಬಲ ನೀಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಇನ್ನಾದರೂ ಸಂಘಟನೆಯವರು, ದಲಿತರು ನಿಜವಾದ ದಲಿತ ವಿರೋಧಿಗಳು, ಸಂವಿಧಾನ ವಿರೋಧಿಗಳು ಯಾರು ಎಂಬುದರ ಬಗ್ಗೆ ಚಿಂತಿಸಬೇಕಾಗಿದೆ. ಲೋಕಸಭೆ ಚುನಾವಣೆಯಲ್ಲಿ ದಲಿತ ವಿರೋಧಿಯಾದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕಾರ್ತಿಕ್ ಮರಿಯಪ್ಪ,ಸ್ವಾಮಿ , ನಗರ ಪಾಲಿಕೆಯ ಮಾಜಿ ಸದಸ್ಯರಾದ ಕೃಷ್ಣ , ಮುರಳೀಧರ, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!