ಹೊಸದಿಗಂತ ವರದಿ ಕಲಬುರಗಿ:
ಕಾಂಗ್ರೆಸ್ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಅರಾಜಕತೆಯನ್ನು ಬೇರುಸಹಿತ ಕಿತ್ತೊಗೆಯುವ ಉದ್ದೇಶದಿಂದ ಬಿಜೆಪಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ’ಅಭಿಯಾನ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬುಧವಾರ ಬಿಜೆಪಿ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಕ್ಕೆ ಬಂದ ನಂತರ ಕಲಬುರಗಿ ಜಿಲ್ಲೆ ಅಕ್ಷರಶಃ ಕಾನೂನು ಸುವ್ಯವಸ್ಥೆ ಇಲ್ಲದ ಪ್ರದೇಶವಾಗಿ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ ಗೂಂಡಾಗಿರಿ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಿಯಾಂಕ್ ಖರ್ಗೆ ತಾವು ನಿರ್ವಹಿಸುತ್ತಿರುವ ಖಾತೆ ಹಾಗೂ ಇಲಾಖೆಯ ಬಗ್ಗೆ ಮಾತನಾಡುವುದಿಲ್ಲ ಎಂದು ಟೀಕಿಸಿದರು.
ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ದೇಶದ ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಈ ಪ್ರಯತ್ನವೂ ವಿಫಲವಾಗಲಿದೆ. ದೇಶದ ಜನರು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಯಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.



