ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಬಿಜೆಪಿ ಪಕ್ಷದಿಂದ “ವೋಟ್ ಚೋರಿ” ನಡೆಯುತ್ತಿದೆ ಎಂಬ ಗಂಭೀರ ಆರೋಪದ ವಿರುದ್ಧ ಕಾಂಗ್ರೆಸ್ ಪಕ್ಷವು ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ನಡೆಸಿ ತನ್ನ ಶಕ್ತಿ ಪ್ರದರ್ಶನ ಮಾಡಿದೆ. ಈ ಸಮಾವೇಶದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಅನೇಕ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು.
ಈ ಪ್ರತಿಭಟನೆಯನ್ನು ನೆಪವಾಗಿಟ್ಟುಕೊಂಡು ಕರ್ನಾಟಕದ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ವೋಟ್ ಚೋರಿ ಪ್ರತಿಭಟನೆಯ ಕಾರಣದಿಂದ ದೆಹಲಿಗೆ ಆಗಮಿಸಿದ ‘ಕೈ’ ನಾಯಕರ ದಂಡಿನಲ್ಲಿ, ಸಿಎಂ ಮತ್ತು ಡಿಸಿಎಂ ಬೆಂಬಲಿತ ಎರಡು ಬಣಗಳ ಸಚಿವರು ಮತ್ತು ಶಾಸಕರು ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಪ್ರತ್ಯೇಕವಾಗಿ ಪ್ರಯತ್ನ ನಡೆಸಿದ್ದಾರೆ.
ಸಮಾವೇಶ ಮುಗಿದರೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಮತ್ತು ನಾಳೆ ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್ ಹಿನ್ನೆಲೆಯಲ್ಲಿ ನಾಳೆ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರು ದೆಹಲಿ ಪೊಲೀಸರ ಮುಂದೆ ಹಾಜರಾಗಲಿದ್ದಾರೆ. ಈ ಎರಡು ದಿನಗಳ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಲು ಪ್ರಯತ್ನಿಸುವ ಸಾಧ್ಯತೆ ಇದೆ. ಈ ನಡುವೆ, ವೋಟ್ ಚೋರಿ ಪ್ರತಿಭಟನೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಿಂದ ವಾಪಸ್ ಆಗಲಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಜಾಪ್ರಭುತ್ವದಲ್ಲಿ ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದರು. ಈ ಪ್ರತಿಭಟನೆಗಾಗಿ 1 ಕೋಟಿ 33 ಲಕ್ಷ ಸಹಿ ಸಂಗ್ರಹ ಮಾಡಲಾಗಿದೆ ಎಂದು ತಿಳಿಸಿದರು.
ಪ್ರತಿಭಟನೆಯ ನಡುವೆಯೇ, ಸಚಿವರಾದ ಆರ್.ಬಿ. ತಿಮ್ಮಾಪುರ, ಮಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಆನೇಕಲ್ ಶಿವಣ್ಣ, ಎ.ಸಿ. ಶ್ರೀನಿವಾಸ್, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಂಎಲ್ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ, ವಸಂತಕುಮಾರ್, ಬಸನಗೌಡ ಬಾದರ್ಲಿ, ಶ್ರೀನಿವಾಸ್, ಮಾಜಿ ಎಂಎಲ್ಸಿ ಯು.ಬಿ. ವೆಂಕಟೇಶ್ ಸೇರಿದಂತೆ ಹಲವರು ಕರ್ನಾಟಕ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಉಪಾಹಾರ ಸೇವಿಸುತ್ತಾ ಸಮಾಲೋಚನೆ ನಡೆಸಿದರು.

