ಕೆಪಿಸಿಸಿ ಅಧ್ಯಕ್ಷೆಯ ಆಯ್ಕೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಉಚ್ಚಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೆಪಿಸಿಸಿ ಮಹಿಳಾ ಅಧ್ಯಕ್ಷರನ್ನಾಗಿ ಸೌಮ್ಯಾ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿದ್ದ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜೊತೆಗೆ, ಪಕ್ಷದಿಂದ ಹಂಚಿಕೆ ಮಾಡಲಾಗಿದ್ದ ಎಲ್ಲ ಜವಾಬ್ದಾರಿಗಳನ್ನು ವಾಪಸ್ ಪಡೆಯಲಾಗಿದೆ ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಅಧ್ಯಕ್ಷರ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ನೇಮಕವಾಗಿತ್ತು. ಇತ್ತ ಕವಿತಾ ರೆಡ್ಡಿ ಪಕ್ಷ ಸಂಘಟನೆ ಮಾಡುತ್ತಾ ಹಂತ ಹಂತವಾಗಿ ಶ್ರಮಿಸುತ್ತಾ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ವಕ್ತಾರೆಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನೇನು ಮಹಿಳಾ ಅಧ್ಯಕ್ಷ ಸ್ಥಾನವೂ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ, ಸೌಮ್ಯಾ ರೆಡ್ಡಿ ಅವರಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಸ್ಥಾನ ನೀಡಲಾಗಿದೆ.

ಕೇವಲ ಸಚಿವರ ಮಗಳೆಂಬ ಕಾರಣಕ್ಕೆ ಲಾಬಿ ಮಾಡಲಾಗಿದ್ದು, ಪಕ್ಷ ಸಂಘಟನೆಗೆ ದುಡಿದವರನ್ನು ಕಡೆಗಣಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜೊತೆಗೆ, ಮಹಿಳಾ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಆಯ್ಕೆಯನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಪತ್ರ ಬರೆದಿದ್ದರು. ಇದರ ಬೆನ್ನಲ್ಲಿಯೇ ಪಕ್ಷದ ತೀರ್ಮಾನದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್ ಹಂಚಿಕೊಂಡಿದ್ದರು.

ಇನ್ನು ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಕವಿತಾ ರೆಡ್ಡಿಗೆ ಈ ಹಿಂದೆಯೂ ನೋಟಿಸ್ ನೀಡಿ, ಮುಂದಿನ ದಿನಗಳಲ್ಲಿ ಒಂತಹ ಹೇಳಿಕೆಗಳನ್ನು ನೀಡದಂತೆ ಮೌಖಿಕ ಸೂಚನೆಯನ್ನೂ ರವಾನಿಸಲಾಗಿತ್ತು. ಆದರೆ, ಪುನಃ ಪಕ್ಷಕ್ಕೆ ಮುಜುಗರ ಆಗುವಂಥ ಹೇಳಿಕೆಗಳನ್ನು ನೀಡುವ ಮತ್ತು ಬರಹಗಳನ್ನು ಬರೆದುಕೊಂಡಿದ್ದೀರಿ ಎಂಬ ಕಾರಣಕ್ಕೆ ಪಕ್ಷದಿಂದ ಯಾಕೆ ಉಚ್ಚಾಟನೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಇನ್ನು ಪಕ್ಷದ ಶಿಸ್ತು ಪಾಲನಾ ಸಮಿತಿಗೆ 7 ದಿನಗಳ ಒಳಗೆ ಸೂಕ್ತ ವಿವರಣೆ ನೀಡುವಂತೆ ಸೂಚಿಸಿತ್ತು. ಆದರೆ, ಉತ್ತರ ಕೊಡದ ಹಿನ್ನೆಲೆಯಲ್ಲಿ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!