ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ 200 ರೂಪಾಯಿ ದಂಡ ವಿಧಿಸಿದೆ.
ದಾಮೋದರ್ ಸಾವರ್ಕರ್ ಕುರಿತ ಹೇಳಿಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಮಯ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.
ಜೊತೆಗೆ ಏಪ್ರಿಲ್ 14 ರಂದು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಏಪ್ರಿಲ್ 14 ರಂದು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಪರವಾಗಿ ವಕೀಲ ಪ್ರಾಂಶು ಅಗರ್ವಾಲ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು. ಲಕ್ನೋದ ಎಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಅಕೋಲಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ವೀರ್ ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಅವರ ಈ ಹೇಳಿಕೆಯ ವಿರುದ್ಧ ಅರ್ಜಿದಾರರಾದ ನೃಪೇಂದ್ರ ಪಾಂಡೆ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು.