ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ವಿಲವಂಕೋಡ್ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕಿ ಎಸ್.ವಿಜಯಧರಣಿ (Vijayadharani) ಅವರು ಶನಿವಾರ ದೆಹಲಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡರು.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಸಿ.ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ ಉಸ್ತುವಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರಿದರು.
ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವರಾದ ವಿಜಯಧರಣಿ ಸಾಂಪ್ರದಾಯಿಕ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಕುಟುಂಬದ ಮೂರು ತಲೆಮಾರುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿವೆ.
ಈಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೇಳಿದಾಗ, ‘ಪಕ್ಷದ ಆಂತರಿಕ ರಾಜಕೀಯವು ಕಾಂಗ್ರೆಸ್ ಪಕ್ಷದ ಪ್ರಮುಖ ದೌರ್ಬಲ್ಯಗಳಲ್ಲಿ ಒಂದಾಗಿದೆ. ಪಕ್ಷದೊಳಗೆ ಪ್ರತಿಯೊಬ್ಬ ನಾಯಕರೂ ತಮ್ಮದೇ ಆದ ಪ್ರತ್ಯೇಕ ಬೆಂಬಲಿಗರ ಗುಂಪು ಮಾಡಿಕೊಂಡು ಸ್ಪರ್ಧಿಸಿ, ಪಕ್ಷದ ಏಳಿಗೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.