Sunday, October 12, 2025

ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿ.ವೈ ವಿಜಯೇಂದ್ರ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆರೆಸ್ಸೆಸ್ ಚಟುವಟಿಕೆ ನಿಷೇಧದ ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೆಂಡಾಮಂಡಲವಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ, ಇದು ಅವರ ಮೂರ್ಖತನದ ಪ್ರದರ್ಶನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ, ಕಾರ್ಯ ಚಟುವಟಿಕೆ ಕುರಿತು ಮಾಹಿತಿ ಕೊರತೆ ಇರುವವರು ಕೇವಲ ತಮ್ಮ ಪ್ರಚಾರಕ್ಕಾಗಿ ಚಟದಿಂದ ಮಾತನಾಡುವವರು ಇಂಥ ಹೇಳಿಕೆ ಕೊಡಲು ಸಾಧ್ಯ ಎಂದು ಹೇಳಿದರು.

ಹಿಂದೆ ಎರಡು ಮೂರು ಬಾರಿ ಇದೇ ರೀತಿ ಆರೆಸ್ಸೆಸ್ ಅನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿತ್ತು. ಅದೇ ಕಾಂಗ್ರೆಸ್ ಪಕ್ಷವು ನಿಷೇಧವನ್ನು ಹಿಂದಕ್ಕೆ ಪಡೆದ ಉದಾಹರಣೆ ದೇಶದ ಮುಂದೆ ಇದೆ ಎಂದು ವಿವರಿಸಿದರು. ಮತ್ತೊಮ್ಮೆ ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ತಿಳಿಸಿದರು.

ಭಾರತ- ಚೀನಾ ಯುದ್ಧದ ಸಂದರ್ಭದಲ್ಲಿ ಆರೆಸ್ಸೆಸ್ ಚಟುವಟಿಕೆಯನ್ನು ಗಮನಿಸಿ, ಶ್ಲಾಘಿಸಿ ಅಂದಿನ ರಿಪಬ್ಲಿಕ್ ಡೇ ಪರೇಡ್‍ನಲ್ಲಿ ಆರೆಸ್ಸೆಸ್‍ಗೆ ಇದೇ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿತ್ತು ಎಂದು ಪ್ರಿಯಾಂಕ್ ಖರ್ಗೆಯವರಿಗೆ ನೆನಪಿಸಲು ಬಯಸುವುದಾಗಿ ಹೇಳಿದರು.

error: Content is protected !!