Thursday, February 29, 2024

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್‌ನವರಿoದ ಪೋಸ್ಟರ್ ಚಳುವಳಿ: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ,ಮೈಸೂರು:

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಆರೋಪಗಳನ್ನು ಮಾಡಿ ಪೋಸ್ಟರ್ ಚಳುವಳಿಯನ್ನು ಮಾಡುತ್ತಿದ್ದಾರೆ. ಇದಕ್ಕೆ ಜನರೇ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಮಾಜಿ ಅಧ್ಯಕ್ಷರಾದ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೮ ತಿಂಗಳಾಗಿದೆ. ಬಿಟ್ಟಿ ಭಾಗ್ಯಗಳನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳನ್ನೂ ಸರಿಯಾಗಿ ಜಾರಿ ಮಾಡುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಆರ್ಥಿಕ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಬರಗಾಲ ತಾಂಡವಾಡುತ್ತಿದ್ದರೂ, ಬರಗಾಲ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸುವಲ್ಲಿಯೂ ವಿಫಲರಾಗಿದ್ದಾರೆ. ದುರಾಡಳಿತವನ್ನು ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬಂದಾಗ, ಆಡಳಿತ ವಿಫಲವಾದಗಲೆಲ್ಲಾ, ಅದನ್ನು ಮುಚ್ಚಿಟ್ಟಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪಗಳನ್ನು ಮಾಡಿ ಪೋಸ್ಟರ್ ಚಳುವಳಿಯನ್ನು ಕಾಂಗ್ರೆಸ್‌ನವರು ನಡೆಸಿಕೊಂಡು ಬಂದಿದ್ದಾರೆ. ಈಗಲೂ ಮಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೆ, ತೆರಿಗೆ ಹಣದಲ್ಲಿ ಸರಿಯಾಗಿ ಪಾಲು ನೀಡದೆ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಪಾಲು, ಅನುದಾನ ನೀಡಿರುವುದನ್ನು ದಾಖಲೆ ಸಮೇತ ನೀಡಿದ್ದಾರೆ. ಯುಪಿಎ ಸರ್ಕಾರದ ಆಡಳಿತದಲ್ಲಿಯೇ ನಮ್ಮ ರಾಜ್ಯಕ್ಕೆ ಕಡಿಮೆ ಅನುದಾನವನ್ನು ನೀಡಲಾಗುತ್ತಿದೆ. ಆದರೆ ಎನ್‌ಡಿಎ ಸರ್ಕಾರದಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ಆಕ್ರೋಶಭರಿತರಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಜನರು ಬಿಜೆಪಿ ಪರವಾಗಿದ್ದಾರೆ. ಬರುವ ಲೋಕಸಭೆ ಚುನಾವಣೆಯಲ್ಲಿ ೨೮ ಸ್ಥಾನಗಳಲ್ಲಿಯೂ ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!