Wednesday, August 10, 2022

Latest Posts

ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಆಕ್ರೋಶ: ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ,ಕೊಡಗು:

ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕುಶಾಲನಗರದಲ್ಲಿ ಸೈಕಲ್ ಜಾಥಾ ನಡೆಸಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಲ್ಲಿನ ಟೋಲ್‌ಗೇಟ್ ಬಳಿಯ ಟಾಟಾ ಪೆಟ್ರೋಲ್ ಬಂಕ್ ಮುಂಭಾಗದಿಂದ ಆರಂಭಗೊಂಡ ಸೈಕಲ್ ಜಾಥಾಕ್ಕೆ ಶಾಸಕ ರಘು ಆಚಾರ್ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕಾಲ್ನಡಿಗೆ ಮೂಲಕ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಕಾರರು ಮೆರವಣಿಗೆ ಸಂದರ್ಭ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ‘ಕೋವಿಡ್ ಲಾಕ್‌ಡೌನ್‌ನಿಂದ ಈಗಾಗಲೇ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಕೇವಲ ಅಧಿಕಾರದ ದುರಾಸೆ, ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮುಳುಗಿದೆ. ಈ ಬಗ್ಗೆ ಜನರು ಎಚ್ಚೆತ್ತುಕೊಂಡು ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕು ಎಂದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಡಿಸಿಸಿ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕುಶಾಲನಗರ ಬ್ಲಾಕ್ ಉಸ್ತುವಾರಿ ಪ್ರದೀಪ್ ರೈ ಪಾಂಬಾರು, ಜಿ.ಪಂ. ಮಾಜಿ ಸದಸ್ಯ ವಿ.ಪಿ.ಶಶಿಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್, ಹಿರಿಯ ಮುಖಂಡರಾದ ಟಿ.ಪಿ.ರಮೇಶ್, ಮಂಜುನಾಥ್ ಗುಂಡೂರಾವ್, ವೆಂಕಪ್ಪಗೌಡ, ಶರೀಫ್ ಇಬ್ರಾಹಿಂ, ಕಿರಣ್‌ಕುಮಾರ್, ಶಿವಶಂಕರ್, ಸುನೀತಾ, ಅಬ್ದುಲ್ ಖಾದರ್, ಲೋಕೇಶ್, ಸುರಯ್ಯ ಅಬ್ರಾರ್, ಜನಾರ್ಧನ್, ಸುರೇಶ್, ನಟೇಶ್‌ಗೌಡ, ಮುಸ್ತಾಫ, ಚೇತನ್ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss