ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರೆಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಜನತೆಗೆ ಆರನೇ ಭಾಗ್ಯವೂ ನೀಡುತ್ತಾರೆ ಅದೇ ಕತ್ತಲೆ ಭಾಗ್ಯ ಎಂದು ಆಕ್ರೋಶ ಹೊರಹಾಕಿದರು.
ಟ್ವೀಟ್ ಮೂಲಕ ಕಾಂಗ್ರೆಸ್ ಕಾಲೆಳೆದ ಹೆಚ್‌ಡಿಕೆ, ʻ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತʼ ಎಂದರು.
ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ..ಗ್ಯಾರಂಟಿ. ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು!! ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ.
ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ. ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ ಎಂದು ಹರಿಹಾಯ್ದರು.
ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ.
ವಿದ್ಯುತ್ ವಿಚಾರದಲ್ಲಿ ಕಾಂಗ್ರೆಸ್‌ನ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ! ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.