ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಸಮನ್ಸ್ ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು, ಈಗಾಗಲೇ ದೆಹಲಿಯ ಎಐಸಿಸಿ ಪ್ರಧಾನ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಜೂನ್13) ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದ್ದು, ರಾಹುಲ್ ಗಾಂಧಿ ಬೆಂಬಲಿಸಿ ಕೈ ನಾಯಕರು ಪಾದಯಾತ್ರೆ ನಡೆಸಿದ್ದಾರೆ.
#WATCH | Congress workers stage protest holding placards in support of party leader Rahul Gandhi ahead of his appearance before ED today in the National Herald case.
Visuals from outside AICC headquarters, Delhi pic.twitter.com/1ihNUIr3Qn
— ANI (@ANI) June 13, 2022
ದೆಹಲಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ದೆಹಲಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಂಸದರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಪಕ್ಷದ ಹಿರಿಯ ಮುಖಂಡರು ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಇಡಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಈ ಪ್ರಕರಣವು ಕೇಂದ್ರ ಸರ್ಕಾರ ಮಾಡಿರುವ ರಾಜಕೀಯ ಪ್ರತೀಕಾರವಾಗಿದ್ದು, ಪ್ರಕರಣದ ವಿಚಾರಣೆ ನಡೆಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ರ್ಯಾಲಿಗೆ ಅನುಮತಿ ನಿರಾಕರಣೆ
ಜಾರಿ ನಿರ್ದೇಶನಾಲಯ (ಇಡಿ) ಕಚೇರಿವರೆಗೆ ರ‍್ಯಾಲಿಗೆ ನಡೆಸಲು ಕಾಂಗ್ರೆಸ್ಗೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ಈಗಾಗಲೇ ತಿಳಿಸಿದ್ದಾರೆ. ದೆಹಲಿಯಲ್ಲಿ ಪ್ರಸ್ತುತ ಕೋಮು ಪರಿಸ್ಥಿತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು, ನವದೆಹಲಿ ವ್ಯಾಪ್ತಿಯಲ್ಲಿ ಯಾವುದೇ ರ‍್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ಇಡಿ ಕಚೇರಿಗೆ ಭೇಟಿ ನೀಡುವ ಹಿನ್ನೆಲೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಾರಿ ನಿರ್ದೇಶನಾಲಯ ಕಚೇರಿ ಮುಂದೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.