ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಶಿವಮೊಗ್ಗ:
ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢಗೊಳ್ಳಲು ವೇದಿಕೆ ಸಿಕ್ಕಂತೆ ಆಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ತಮ್ಮ ಸ್ವಗೃಹಕ್ಕೆ ಬುಧವಾರ ಮಾಜಿ ಶಾಸಕ ಮಧು ಬಂಗಾರಪ್ಪ ಭೇಟಿ ನೀಡಿದ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ನಾಯಕರ ಕೊರತೆ ಇತ್ತು. ಮಧು ಬಂಗಾರಪ್ಪ ಬಂದಿದ್ದರಿಂದ ನಾಯಕರ ಕೊರತೆ ನೀಗಿದೆ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಸ್ಥಿತಿ ಸ್ವಲ್ಪ ಕಷ್ಟದಲ್ಲಿದೆ. ನನ್ನ ಮಾರ್ಗದರ್ಶನದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಎಲ್ಲ ಪ್ರಮುಖರ ಪಾಲ್ಗೊಳ್ಳುವಿಕೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತದೆ. ಜೊತೆಗೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಸಹ ಮಧು ಬಂಗಾರಪ್ಪ ಕಾಂಗ್ರೆಸ್ ಸಂಘಟನೆಗೆ ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಮಧು ಬಂಗಾರಪ್ಪ ಮಾತನಾಡಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ನನಗೆ ಹೆಚ್ಚು ಸಂತೋಷ ತಂದಿದೆ. ಜೆಡಿಎಸ್ನಲ್ಲಿ ನಾಯಕತ್ವ ಬೆಳವಣಿಗೆ, ಪಕ್ಷದೊಳಗಿನ ಕೆಲವು ಲೋಪಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿ, ವರಿಷ್ಟರ ಎದುರು ನೇರವಾಗಿಯೆ ಹೇಳಿದ್ದೇನೆ. ಆದರೆ ಲೋಪ ಸರಿಪಡಿಸಿಕೊಳ್ಳುವ ಪ್ರಯತ್ನವಾಗಲಿಲ್ಲ. ಇದೀಗ ಹಿರಿಯರಾದ ಜಿ.ಟಿ.ದೇವೆಗೌಡರು ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.