Wednesday, February 28, 2024

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಿಗಲಿದೆ ಅತೀ ಹೆಚ್ಚು ಸ್ಥಾನ: ಸಚಿವ ಮಧು ಬಂಗಾರಪ್ಪ

ಹೊಸದಿಗಂತ ವರದಿ, ಅಂಕೋಲಾ:

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನತೆಯ ವಿಶ್ವಾಸಕ್ಕೆ ಪಾತ್ರವಾಗಿದ್ದು ಬರುವ ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನಗಳನ್ನು ನೀಡಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರದ ಕಾರ್ಯಕ್ರಮಗಳು ಇಂದು ಮನೆ ಮನೆಗಳಿಗೆ ತಲುಪಿವೆ ಲಕ್ಷಾಂತರ ಬಡ ಕುಟುಂಬಗಳು ಸರ್ಕಾರದ ಭಾಗ್ಯಗಳ ಲಾಭ ಪಡೆಯುವ ಮೂಲಕ ಆರ್ಥಿಕವಾಗಿ ಶಕ್ತಿಯನ್ನು ಪಡೆದಿವೆ ಕಾರ್ಯಕ್ರಮಗಳಿಂದ ವಂಚಿತರಾದವರನ್ನು ಗುರುತಿಸಿ ಅವರಿಗೆ ಪ್ರಯೋಜನಗಳನ್ನು ದೊರಕಿಸಿಕೊಡಲು ಆಡಳಿತಾತ್ಮಕವಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಕ್ರಮಗಳಿಂದಾಗಿ ಆರ್ಥಿಕವಾಗಿ ತೊಂದರೆಗೆ ಸಿಲುಕಿದ್ದ ಜನರಿಗೆ ರಾಜ್ಯ ಸರ್ಕಾರದ ಯೋಜನೆಗಳು ಸಹಕಾರಿಯಾಗಿವೆ ಎಂದ ಅವರು ಯೋಜನೆಗಳಿಂದ ಸರ್ಕಾರ ಆರ್ಥಿಕವಾಗಿ ಹರಾಜಾಗಿದೆ ಎಂದು ಬಿಜೆಪಿ ಹೇಳುತ್ತಿರುವುದು ಸತ್ಯಕ್ಕೆ ದೂರವಾಗಿದ್ದು ಶಿಕ್ಷಣ ಇಲಾಖೆಯಲ್ಲಿ ಮಕ್ಕಳಿಗೆ ಸಿಗುವ ಸವಲತ್ತುಗಳನ್ನು ಹೆಚ್ಚಿಸಲಾಗಿದೆ, ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿರುವುದರಿಂದ ಶಾಲೆಗಳಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಿದೆ ಎಂದು ಹೇಳಿದರು.

ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗುತ್ತಿದ್ದು ಶಾಲೆಗಳಲ್ಲಿ ಸುಮಾರು 43 ಸಾವಿರ ಶಿಕ್ಷಕರ ಕೊರತೆ ಇದೆ ಹಂತ ಹಂತವಾಗಿ ಶಿಕ್ಷಕರ ಭರ್ತಿ ಪ್ರಕ್ರಿಯೆ ನಡೆಸಲಾಗುವುದು ಎಂದ ಅವರು ಒಂದು ವರ್ಷದಲ್ಲಿ 500 ಶಾಲೆಗಳನ್ನು ಕೆಪಿಎಸ್ ಶಾಲೆಯಾಗಿ ಪರಿವರ್ತನೆ ಮಾಡಲಾಗುವುದು 20 ಸಾವಿರ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಶ್ರೀರಾಮ ಮಂದಿರ ಉದ್ಘಾಟನೆಯ ದಿನ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಆ ಕುರಿತು ರಾಜ್ಯದ ಮುಖ್ಯ ಮಂತ್ರಿಗಳು ನಿರ್ಣಯ ತೆಗೆದುಕೊಳ್ಳಬೇಕು ಅವರಿಂದ ಸೂಚನೆ ಬಂದರೆ ರಜೆ ನೀಡುವ ಕುರಿತು ಯೋಚನೆ ಮಾಡಲಾಗುವುದು ಎಂದು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ 4 ವರ್ಷಗಳ ಕಾಲ ಕಣ್ಮರೆಯಾಗಿದ್ದು ಚುನಾವಣೆ ಸಂದರ್ಭದಲ್ಲಿ ಕಾಣಿಸಿಕೊಂಡು ದ್ವೇಷವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ ಉತ್ತರ ಕನ್ನಡದಲ್ಲಿ ಅನಂತಕುಮಾರ ಹೆಗಡೆ ಮತ್ತು ಮಂಗಳೂರಿನಲ್ಲಿ ನಳಿನ್ ಕುಮಾರ ಕಟೀಲ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷದ ಗೆಲುವು ಸುಲಭವಾಗಲಿದೆ ಎಂದು ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ್, ಹಿರಿಯ ಮುಖಂಡ ರಮಾನಂದ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!