ಹೊಸದಿಗಂತ ವರದಿ,ಬೀದರ್:
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕು ಎಂದಾದರೆ ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಇಂದು ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಸೇವೆಯ ಸುವರ್ಣ ಮಹೋತ್ಸವ ಹಾಗೂ ೩೭೧(ಜೆ) ತಿದ್ದುಪಡಿ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂವಿಧಾನದ ೩೭೧(ಜೆ) ತಿದ್ದುಪಡಿ ಕಾಂಗ್ರೆಸ್ ಪಕ್ಷದ ಕೊಡುಗೆ, ಹಿಂದುಳಿದ ಹಣೆಪಟ್ಟಿ ಕಳಚಲು ಸಮಾಜದ ಎಲ್ಲಾ ವರ್ಗದ ಜನರ ಹಿತಕ್ಕಾಗಿ ೩೭೧ ಜೆ ತಿದ್ದುಪಡಿ ಮಾಡಲಾಯಿತು. ನಮ್ಮದು ಸಂವಿಧಾನ ಪಾಲಿಸುವ ಪಕ್ಷ, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕು ಎಂದಾದರೆ ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರಬೇಕೆಂದು ನೆರೆದಿದ್ದ ಕಾರ್ಯಕರ್ತರಿಗೆ ಕರೆ ನೀಡಿದರು.
ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಇಡಿ, ಐಟಿ, ಸಿಬಿಐ ಹಿಡಿತದಲ್ಲಿಟ್ಟು ವಿರೋಧ ಪಕ್ಷದ ನಾಯಕರಿಗೆ ಹೆದರಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಪ್ರಧಾನಿ ಮೋದಿ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
೨೦೨೪ರ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಮಾತ್ರ ನೀವು ಸನ್ಮಾನ ಮಾಡಿದ್ದು ನನ್ನ ೫೪ ವರ್ಷಗಳ ರಾಜಕೀಯ ದಲ್ಲಿದ್ದು ಸೇವೆ ಸಲ್ಲಿಸಿದ್ದು ಸಾರ್ಥಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹಿಮ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಜಿಲ್ಲಾ ಕಾಂಗ್ರೆಸ್ ನಾಯಕ ವಿಶ್ವನಾಥ ದಿನೆ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸ್ವಾಗತ ಕೋರಿದರು.