ಹೊಸದಿಗಂತ ವರದಿ, ಚಿತ್ರದುರ್ಗ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸೋಮವಾರ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ, ಹೂಮಳೆ ಗರೆದು ಸ್ವಾಗತ ಕೋರಿದರು.
ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀಕಾಂತ್ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರ ಪಾಡು ನಾಯಿ ಪಾಡಾಗಿದೆ ಎಂದ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು. ಇದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಇದನ್ನು ಕಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂಕ ಪ್ರೇಕ್ಷಕರಾದರು.
ಕಾರ್ಯಕರ್ತರಿಗೆ ಪಕ್ಷದಲ್ಲಿ ಮಾನ್ಯತೆ ದೊರೆಯುತ್ತಿಲ್ಲ. ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತದೆ. ಚುನಾವಣೆ ಮುಗಿದ ನಂತರ ಕಾರ್ಯಕರ್ತರನ್ನು ಯಾರೂ ಕೇಳುವವರೇ ಇರುವುದಿಲ್ಲ. ಹೀಗಾದಲ್ಲಿ ಕಾರ್ಯಕರ್ತರು ತಮ್ಮ ಸಂಕಷ್ಟಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀಕಾಂತ್ ಅಸಮಾಧಾನ ಹೊರಹಾಕಿದರು.
ಇದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಮುಖಂಡರು, ಕೆಲವು ಕಾರ್ಯಕರ್ತರು ಲಕ್ಷ್ಮೀಕಾಂತ್ ವಿರುದ್ಧ ಹರಿಹಾಯ್ದರು. ಸಚಿವರ ಮುಂದೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆಯಿತು. ಜಿಲ್ಲಾ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಸೇರಿದಂತೆ ಹಲವು ಲಕ್ಷ್ಮೀಕಾಂತ್ ಜೊತೆ ವಾಗ್ವಾದ ನಡೆಸಿದರು. ಪರಸ್ಪರ ಮಾತಿನ ಆರ್ಭಟದ ನಡುವೆ ಗಲಾಟೆ ತಾರಕ್ಕೇರಿತು.