ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ರಾಮಲೀಲಾ ಮೈದಾನದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಆರೋಪಿಸಿದೆ.
ಭಾರತದ ಪ್ರಜಾಪ್ರಭುತ್ವ ಸದೃಢವಾಗಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಜನರನ್ನು ದಾರಿತಪ್ಪಿಸುವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ಅವಮಾನಿಸುವ ಮತ್ತು ಮಾನಹಾನಿ ಮಾಡುವ ಸಂಚಿನಲ್ಲಿ ಕಾಂಗ್ರೆಸ್ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ಹೇಳಿದೆ.
ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚುನಾವಣಾ ಸುಧಾರಣೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ತಮ್ಮ ವಿರುದ್ಧದ ಸುಳ್ಳು ಆರೋಪಗಳಿಗೆ ಪಾಯಿಂಟ್-ಬೈ-ಪಾಯಿಂಟ್ ಪ್ರತ್ಯಾರೋಪದ ಮೂಲಕ ವಿಪಕ್ಷಗಳಿಗೆ ಮುಖಭಂಗ ಉಂಟು ಮಾಡಿದ್ದರು. ಇದಕ್ಕಾಗಿ ಕಾಂಗ್ರೆಸ್ ಈ ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

