ಹೊಸದಿಗಂತ ವರದಿ ಚಿತ್ರದುರ್ಗ:
ಈ ಹಿಂದೆ ಕಾಂಗ್ರೆಸ್ ಪಕ್ಷ ಮತ ಯಂತ್ರಗಳ ಬಗ್ಗೆ ವಿರೋಧ ವ್ಯಕ್ತಪಡಿಸಿತ್ತು. ಈಗ ಎಸ್.ಐ.ಆರ್. ಪ್ರಕ್ರಿಯೆಯನ್ನು ವಿರೋಧ ಮಾಡುತ್ತಿದೆ. ಆದರೆ ಇದು ಚುನಾವಣಾ ಆಯೋಗ ಸಂವಿಧಾನಾತ್ಮಕವಾಗಿ ಮಾಡುವಂತಹ ಕಾರ್ಯವಾಗಿದೆ. ಚುನಾವಣಾ ಆಯೋಗಕ್ಕೆ ಸಹಕಾರ ನೀಡುವ ಮೂಲಕ ಈ ಕಾರ್ಯವನ್ನು ಯಶಸ್ವಿಗೂಳಿಸಬೇಕಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು.
ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ, ನಗರಮಂಡಲ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ನಗರದ ಜಗಳೂರು ಮಹಾಲಿಂಗಪ್ಪ ಟವರ‍್ಸ್‌ನಲ್ಲಿ ಹಮ್ಮಿಕೊಂಡಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ, ಮಹಾ ಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪ್ರಮುಖರ ಮತ್ತು ಬಿಎಲ್‌ಎ – 2ಗಳ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಹಲವಾರು ರಾಜ್ಯಗಳಲ್ಲಿ ಈ ಎಸ್‌ಐಆರ್ ಕಾರ್ಯ ನಡೆದಿದೆ. ಇದರಲ್ಲಿ ನಮ್ಮ ದೇಶದ ಮತದಾರರಲ್ಲದ ಲಕ್ಷಾಂತರ ಜನರನ್ನು ಮತದಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.
ಈಗ ನಮ್ಮ ರಾಜ್ಯದಲ್ಲಿ ಈ ಕಾರ್ಯ ಪ್ರಾರಂಭವಾಗಿದೆ. ನಮ್ಮ ಪಕ್ಷದವರು ಬೂತ್‌ಗಳಲ್ಲಿ ನಿಮ್ಮ ಮನೆಯ ಸುತ್ತಮುತ್ತಲಿನ ಜನರ ಮತಗಳು ಇವೆಯೇ ಎಂಬುದನ್ನು ಪರಿಶೀಲನೆ ಮಾಡುವ ಮೂಲಕ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಸಹಕಾರ ನೀಡಬೇಕಿದೆ ಎಂದ ಅವರು, ಕಾಂಗ್ರೆಸ್ ಪಕ್ಷದವರು ಎಸ್‌ಐಆರ್‌ನ್ನು ವಿರೋಧಿಸುತ್ತಿದೆ. ಇದು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲುವಿಗಾಗಿ ಮಾಡುತ್ತಿರುವ ಕುತಂತ್ರ ಎಂದು ಬೊಬ್ಬೆ ಹೊಡೆಯುತ್ತಿದೆ. ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡು ಬೂತ್‌ಗಳಲ್ಲಿನ ಮತದಾರರಿಗೆ ನಿಜಾಂಶ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಎಸ್.ಐ.ಆರ್ ಎನ್ನುವುದು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಮಾಡುವಂತಹ ಕಾರ್ಯವಲ್ಲ. ಅದು ಚುನಾವಣಾ ಆಯೋಗ ಮಾಡುವಂತಹ ಕೆಲಸ. ಇದರಲ್ಲಿ ಯಾರೂ ಸಹ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಚುನಾವಣಾ ಆಯೋಗ ಪೂರ್ಣ ಪ್ರಮಾಣದಲ್ಲಿ ನಿರ್ವಹಣೆ ಮಾಡುತ್ತಿದೆ. ಇದರಲ್ಲಿ ನಮ್ಮ ವಾರ್ಡ್ ನ ಮತದಾರರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಿ ಕೆಲಸ ಮಾಡುವುದು ನಮ್ಮ ಕೆಲಸವಾಗಿದೆ ಎಂದರು.
ನಮ್ಮ ದೇಶದ ಹಲವಾರು ರಾಜ್ಯಗಳಲ್ಲಿ ಈ ಪ್ರಕ್ರಿಯೆ ನಡೆದಿದೆ. ಇದೇ ರೀತಿ ನಮ್ಮ ರಾಜ್ಯದಲ್ಲಿಯೂ ಸಹಾ ಮುಂದಿನ ದಿನಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇದಕ್ಕೆ ನಮ್ಮ ಪಕ್ಷದ ಪ್ರತಿಯೊಬ್ಬರೂ ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕೆಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ ಗುಂಡಾರ್ಪಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಿ.ಟಿ.ಸುರೇಶ್ ಸಿದ್ದಾಪುರ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರ ನವೀನ್ ಚಾಲುಕ್ಯ, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.



