ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್ 4 ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ
ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಿದೆ.
ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಶಾಲೆ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.



