September 29, 2026
Tuesday, September 29, 2026
spot_img

ರಾಮ ಮಂದಿರ ಕಾಣಿಕೆ ದುರುಪಯೋಗ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಿಗೆ ನಿರಾಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣ ದುರುಪಯೋಗವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದೇ ವಿಚಾರವಾಗಿ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿರುವುದರಿಂದ, ಹೈಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ.

ಅರ್ಜಿದಾರರ ಬೇಡಿಕೆ ಏನಿತ್ತು?

ವಕೀಲ ಮೋಹಿತ್ ಅಶೋಕ್ ಎಂಬುವವರು ಮಾಧ್ಯಮಗಳ ವರದಿ ಆಧಾರದ ಮೇಲೆ ಲಕ್ನೋ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ರಾಮ ಮಂದಿರದ ಕಾಣಿಕೆ ಹಣವನ್ನು ಟ್ರಸ್ಟ್‌ನ ಕೆಲವು ಸಿಬ್ಬಂದಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಅವರು, ಈ ಹಗರಣದ ಬಗ್ಗೆ ಸಿಬಿಐನಿಂದ ಕಾಲಮಿತಿಯ ತನಿಖೆ ಹಾಗೂ ‘ಸಿಎಜಿ’ (CAG) ಮೂಲಕ ವಿಶೇಷ ಆಡಿಟ್ ನಡೆಸುವಂತೆ ಒತ್ತಾಯಿಸಿದ್ದರು.

ನ್ಯಾಯಾಲಯದ ಪ್ರಮುಖ ಆದೇಶ

ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು ಮಂಜಿವೆ ಶುಕ್ಲಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಆರ್‌ಜೆಡಿ ಸಂಸದ ಸುಧಾಕರ್ ಸಿಂಗ್ ಅವರು ಈಗಾಗಲೇ ಇದೇ ವಿಷಯವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಂತ್ರ ತನಿಖೆಗೆ ಆಗ್ರಹಿಸಿ ಅರ್ಜಿ ಸಲ್ಲಿಸಿದ್ದಾರೆ. ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗ, ಹೈಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತು.

ತನಿಖೆಯ ಪ್ರಸ್ತುತ ಸ್ಥಿತಿ

ಈಗಾಗಲೇ ಉತ್ತರ ಪ್ರದೇಶ ಸರ್ಕಾರವು ಲಕ್ನೋ ಕಮಿಷನರ್ ವಿಜಯ್ ವಿಶ್ವಾಸ್ ಪಂತ್ ನೇತೃತ್ವದಲ್ಲಿ ಮೂವರು ಸದಸ್ಯರ ಎಸ್‌ಐಟಿ (SIT) ತಂಡವನ್ನು ರಚಿಸಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತ ನೌಕರರನ್ನು ವಶಕ್ಕೆ ಪಡೆಯಲಾಗಿದ್ದು, ಬ್ಯಾಂಕ್ ಖಾತೆಯಲ್ಲಿದ್ದ 5 ಲಕ್ಷ ರೂ. ಹಾಗೂ ಇತ್ತೀಚಿನ ದಾಳಿಯಲ್ಲಿ ಸಿಕ್ಕ 77 ಲಕ್ಷ ರೂ. ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Must Read