ಹೊಸದಿಗಂತ ಡಿಜಿಟಲ್ ಡೆಸ್ಕ್:
2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ.
ಡಿಸೆಂಬರ್ 19ರಂದು ದುಬೈನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಸಾಕಷ್ಟು ಅಳೆದುತೂಗಿ ತಮಗೆ ಬೇಕಾದ ಆಟಗಾರರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿವೆ.
ಇದೀಗ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಭಾರತದಲ್ಲಿಯೇ ಆಯೋಜಿಸಲು ಬಿಸಿಸಿಐ ತೀರ್ಮಾನಿಸಿದೆ. ಮುಂಬರುವ ಮಾರ್ಚ್ 22ರಿಂದ ಟೂರ್ನಿಗೆ ಚಾಲನೆ ಸಿಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲೋಕಸಭಾ ಚುನಾವಣೆ ಕೂಡಾ ಅದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿಯೂ ಭಾರತದಲ್ಲಿಯೇ ಐಪಿಎಲ್ ಆಯೋಜಿಸುವುದಾಗಿ ಬಿಸಿಸಿಐ ಮೂಲಗಳು ಈಗಾಗಲೇ ಸ್ಪಷ್ಟಪಡಿಸಿವೆ.
ಕಳೆದ ಬಾರಿ ನಡೆದ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.