ಕೊಡವ ಕೌಟುಂಬಿಕ ಹಾಕಿ ಟೂರ್ನಿಗೆ ಕ್ಷಣಗಣನೆ

ವರದಿ: ದುಗ್ಗಳ ಸದಾನಂದ.
ನಾಪೋಕ್ಲು: ಕೊಡಗು ಜಿಲ್ಲೆಯಲ್ಲಿ ಮತ್ತೆ ಹಾಕಿ ಹಬ್ಬದ ಸಂಭ್ರಮ ಮರುಕಳಿಸುತ್ತಿದ್ದು ಇಂದಿನಿಂದ ಆರಂಭಗೊಳ್ಳುವ 23ನೇ ಕೊಡವ ಕೌಟುಂಬಿಕ ಹಾಕಿ ಟೂರ್ನಿಗೆ ಕ್ಷಣಗಣನೆ ಪ್ರಾರಂಭವಾಗಿದೆ.
ಇಲ್ಲಿನ ಚೆರಿಯಪರಂಬು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಕಿ ಟೂರ್ನಿಯ ಉದ್ಘಾಟನೆಗೆ ಆಗಮಿಸಲಿರುವುದು ಉತ್ಸವದ ಮೆರುಗು ಮತ್ತಷ್ಟು ಹೆಚ್ಚಿಸಿದೆ.
ಅಪ್ಪಚೆಟ್ಟೋಳಂಡ ಕುಟುಂಬ ಕೌಟುಂಬಿಕ ಹಾಕಿ ಉತ್ಸವದ ಆತಿಥ್ಯ ವಹಿಸಿದ್ದು ಶುಕ್ರವಾರ ಅಂತಿಮ ಹಂತದ ಸಿದ್ಧತೆ ನಡೆಸಿತು.

ಕೌಟುಂಬಿಕ ಕೊಡವ ಹಾಕಿ ಟೂರ್ನಿಗಾಗಿ ಕ್ರೀಡಾಂಗಣದಲ್ಲಿ ತಯಾರಿ ನಡೆದಿದ್ದು ಕೊಡಗಿನ ಹಾಕಿ ಪ್ರಿಯರು ವೀಕ್ಷಿಸಲು ಎಲ್ಲಾ ಸೌಲಭ್ಯಗಳನ್ನು ಒಳಗೊಂಡ 32 ಲಕ್ಷ ರೂ.ವೆಚ್ಚದ ಬೃಹತ್ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. 25,000 ಜನರು ಒಟ್ಟಾಗಿ ಪಂದ್ಯ ವೀಕ್ಷಿಸಬಹುದಾಗಿದೆ. ಅಲ್ಲದೆ 600 ಮಂದಿ ಕುಳಿತುಕೊಳ್ಳಲು ವಿಐಪಿ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗಿದ್ದು ಮೈದಾನ ಹಾಗೂ ಗ್ಯಾಲರಿ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ಒಂದೇ ಮೈದಾನದಲ್ಲಿ ಒಟ್ಟು ಮೂರು ಸುಸಜ್ಜಿತ ಹಾಕಿ ಮೈದಾನ ತಯಾರಾಗಿದ್ದು ಒಂದು ತಿಂಗಳ ಕಾಲ ನಡೆಯುವ ಈ ಹಾಕಿ ಉತ್ಸವದಲ್ಲಿ ಹಾಕಿ ಪ್ರಿಯರು ಪಾಲ್ಗೊಂಡು ಸಂಭ್ರಮಿಸಲಿದ್ದಾರೆ.

ಪಾಂಡಂಡ ಕುಟ್ಟಪ್ಪ- ಕಾಶಿ ಸಹೋದರರ ಪರಿಕಲ್ಪನೆಯಲ್ಲಿ ಕೊಡವ ಹಾಕಿ ಸಂಸ್ಥೆ ಮೂಲಕ ಪ್ರತಿವರ್ಷ ಒಂದೊಂದು ಕೊಡವ ಕುಟುಂಬದ ನೇತೃತ್ವದಲ್ಲಿ ಹಾಕಿ ಉತ್ಸವ ಆಯೋಜಿಸಲಾಗುತ್ತಿದೆ. ಪ್ರಕೃತಿ ವಿಕೋಪ, ಕೋವಿಡ್ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳಿಂದ ಸ್ದಗಿತಗೊಂಡಿದ್ದ ಹಾಕಿ ಉತ್ಸವಕ್ಕೆ ಈ ವರ್ಷ ಚಾಲನೆ ದೊರೆತಿದ್ದು 336 ತಂಡ ಪಾಲ್ಗೊಳ್ಳುತ್ತಿರುವುದು ಐತಿಹಾಸಿಕ ದಾಖಲೆ. ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ 1.5 0 ರಿಂದ 2 ಕೋಟಿ ರೂ. ರಾಜ್ಯ ಸರ್ಕಾರ ,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಾಕಿ ಉತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆಸಲಾಗಿದೆ.

ಏನೇನುಕಾರ್ಯಕ್ರಮ ?

* ಬೆಳಿಗ್ಗೆ 10 ಗಂಟೆಗೆ ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ
* ಕೊಡವ ಕುಟುಂಬಗಳ 23 ಮಂದಿ ಪ್ರತಿನಿಧಿಗಳು ಆಕಾಶಕ್ಕೆ ಗುಂಡು ಹಾರಿಸುವ ಮೂಲಕ ಟೂರ್ನಿಗೆ ಸಾಂಪ್ರದಾಯಿಕ ಚಾಲನೆ.
* ಬೆಳಿಗ್ಗೆ 11.15 ಗಂಟೆಗೆ ಕೊಡವ ಹಾಕಿ ಅಕಾಡೆಮಿ ಮತ್ತು ಅಪ್ಪಚೆಟ್ಟೋಳಂಡ ಹಾಕಿ ಉತ್ಸವದ ಧ್ವಜಾರೋಹಣ
* ಬೆಳಿಗ್ಗೆ 11.30 ಗಂಟೆಗೆ 37ನೇ ಕೂರ್ಗ್ ಫೀಲ್ಡ್ ರೆಜಿಮೆಂಟ್ ತಂಡ ಮತ್ತು ಕೊಡವ ಅಕಾಡೆಮಿ ಇಲೆವೆನ್ ತಂಡಗಳ ನಡುವೆ ಪ್ರದರ್ಶನ ಪಂದ್ಯ
* ಮಧ್ಯಾಹ್ನ 2.30ಕ್ಕೆ ಇಂಡಿಯಾ ಜೂನಿಯರ್ ಇಲೆವೆನ್ ಮತ್ತು ಕರ್ನಾಟಕ ಇಲೆವೆನ್ ತಂಡಗಳ ನಡುವೆ ಮತ್ತೊಂದು ಪ್ರದರ್ಶನ ಪಂದ್ಯ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!