ಹೊಸದಿಗಂತ ಹಾಸನ:
ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.
ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ. ಅರಸು ವಂಶಸ್ಥರು ಬನ್ನಿ ಕಡಿದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ತೆರೆಯಲಿದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್, ಸಂಸದ ಶ್ರೇಯಸ್‌ಪಟೇಲ್, ಡಿಸಿ, ಎಸ್ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಿದೆ.
ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗಾಗಿ ಹಲವು ವಿಶೇಷ ವ್ಯವಸ್ಥೆ ಮಾಡಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ.
ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.