ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸ ದಿಗಂತ ವರದಿ, ತುಮಕೂರು :
ಕೋವಿಡ್ ಸೋಂಕಿನ ಎರಡನೇ ಅಲೆಯನ್ನು ಕಟ್ಟಿಹಾಕಲೇ ಬೇಕಾಗಿದ್ದು ಅದಕ್ಕಾಗಿ ಎಲ್ಲಾ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ತುಮಕೂರು ಉಸ್ತುವಾರಿ ಕಾರ್ಯದರ್ಶಿಗಳಾದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೂಚಿಸಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಕೇಶ್ ಸಿಂಗ್, ಸೋಂಕಿತರಿಗೆ ಅಗತ್ಯ ಔಷಧಗಳನ್ನು ಒದಗಿಸುವ ಮತ್ತು ಸಕಾಲದಲ್ಲಿ ಚಿಕಿತ್ಸೆ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್ ಲಸಿಕೆ, ತುರ್ತು ಔಷಧಿ, ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಆದರೂ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಯುದ್ಧೋಪಾದಿಯಲ್ಲಿ ಕೆಲಸ ಮಾಡುವಂತೆ ರಾಕೇಶ್ ಸಿಂಗ್ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈಎಸ್ ಪಾಟೀಲ್, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ. ವಂಶಿಕೃಷ್ಣ, ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗೇಂದ್ರಪ್ಪ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.