Monday, November 10, 2025

ಬೆಂಗಳೂರಿನ ಬಗ್ಗೆ ಕ್ರಿಕೆಟರ್ ಸುನೀಲ್ ಜೋಶಿ ಟ್ವೀಟ್: ಸಿಎಂರನ್ನ ಟ್ಯಾಗ್ ಮಾಡಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಐಟಿ ದಿಗ್ಗಜರು ಮಹಾನಗರದ ರಸ್ತೆ ಗುಂಡಿಗಳ ಸಮಸ್ಯೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರೆ, ಇದೀಗ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ನಗರದ ಟ್ರಾಫಿಕ್ ಜಾಮ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಸುನೀಲ್ ಜೋಶಿ ಅವರು ತಮ್ಮ ಟ್ವೀಟ್‌ನಲ್ಲಿ ಕೆಐಎಎಲ್ ಏರ್ಪೋರ್ಟ್ ಮಾರ್ಗದಲ್ಲಿ ಬೆಳಗಿನ ವೇಳೆ ಭಾರೀ ವಾಹನಗಳ ಸಂಚಾರದಿಂದ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ ಕುರಿತು ಪ್ರಶ್ನೆ ಎತ್ತಿದ್ದಾರೆ. ದಿನದ ವೇಳೆಯಲ್ಲಿಯೇ ಸರಕು ಮತ್ತು ನಿರ್ಮಾಣ ವಾಹನಗಳಿಗೆ ಸಂಚಾರಕ್ಕೆ ಅನುಮತಿ ನೀಡಿರುವುದು ಜನ ಸಾಮಾನ್ಯರ ಪ್ರಯಾಣವನ್ನು ಕಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಸಾಮಾನ್ಯವಾಗಿ ಇಂತಹ ವಾಹನಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಅನುಮತಿ ನೀಡಬೇಕು ಎಂಬ ನಿಯಮವಿದ್ದರೂ, ಅದು ಕಾಪಾಡಲಾಗುತ್ತಿಲ್ಲ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮಾಜಿ ಕ್ರಿಕೆಟರ್ ಅವರ ಪ್ರಕಾರ, ಈ ವಾಹನಗಳು ಫಾಸ್ಟ್ ಲೇನ್‌ಗಳಲ್ಲಿ ಸಂಚರಿಸುತ್ತಿದ್ದು, ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಮತ್ತು ಬರುವ ಪ್ರಯಾಣಿಕರು ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. “ದಯವಿಟ್ಟು ಈ ವಿಷಯದಲ್ಲಿ ಕ್ರಮ ಕೈಗೊಳ್ಳಿ ಸರ್, ಸಾಮಾನ್ಯ ಜನರು ಪ್ರಯಾಣಿಸಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ,” ಎಂದು ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ.

ಸುನೀಲ್ ಜೋಶಿಯ ಈ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗಿದ್ದು, ಅನೇಕ ನಾಗರಿಕರು ಅವರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳು ಅಥವಾ ನಾಯಕರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

error: Content is protected !!