ಹೊಸದಿಗಂತ ವರದಿ,ಮಡಿಕೇರಿ:
ಯುವ ಜನರು ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕರೆ ನೀಡಿದರು.
ನಗರದ ಕೋಟೆ ಆವರಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹ ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ವಿವಿಧ ಕಾರಣಗಳಿಂದ ಹರಿದು ಹಂಚಿಹೋಗಿದ್ದ ಪ್ರದೇಶಗಳನ್ನು ಭಾಷಾವಾರು ಪುನರ್ ವಿಂಗಡಣೆಯ ಆಧಾರದ ಮೇಲೆ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಟ್ಟುಗೂಡಿಸಿ 1956ರ ನವೆಂಬರ್-1 ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂತು. ಆ ಕಾರಣಕ್ಕೆ ನವೆಂಬರ್ 1 ಕನ್ನಡಿಗರು ಹೆಮ್ಮೆ ಪಡುವ ದಿನವಾಗಿದೆ ಎಂದು ಸಚಿವರು ನುಡಿದರು.
ರಾಷ್ಟ್ರವು ಹಲವು ಸಂಸ್ಕೃತಿ, ಭಾಷೆ, ಸಂಪ್ರದಾಯ ಒಳಗೊಂಡಿರುವ ದೇಶವಾಗಿದ್ದು, ಭಾರತೀಯರು ಅನೇಕತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಜನತೆಯ ಬದುಕಿನ ದೃಷ್ಟಿಯಿಂದ ಪ್ರಾಂತೀಯ ಆಧಾರದ ಮೇಲೆ ಆಯಾಯ ಪ್ರದೇಶದಲ್ಲಿ ಬಳಕೆಯಲ್ಲಿರುವ ಮಾತೃ ಭಾಷೆಯ ಮೂಲಕವೇ ಆಡಳಿತ ನಡೆಸುವುದು, ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ಇದರಿಂದ ಆಡಳಿತವು ಪ್ರಬಲವೂ, ಪರಿಣಾಮಕಾರಿಯಾಗಿರುತ್ತದೆ ಎಂದರು.
ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ. ಕನ್ನಡ ಭಾಷೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಶಾಸನಗಳಲ್ಲಿ ಕನ್ನಡ ಭಾಷೆ ಬಳಕೆಯಾಗಿರುವುದು ಕಂಡು ಬರುತ್ತದೆ.ಶತ ಶತಮಾನಗಳ ಹಿಂದೆಯೇ ಕನ್ನಡ ಭಾಷೆಯೇ ಸಾರ್ವಭೌಮವಾಗಿತ್ತೆಂಬುದು ಶಾಸನಗಳಲ್ಲಿ ಕಂಡುಬರುತ್ತದೆ. 21 ನೇ ಶತಮಾನದ ಈ ಹೊತ್ತಿನಲ್ಲೂ ಕನ್ನಡ ಭಾಷೆ ಆಧುನಿಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ, ಆದ್ದರಿಂದ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆ ಎಂದು ಭೋಸರಾಜು ತಿಳಿಸಿದರು.
ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಕನ್ನಡ, ಕರ್ನಾಟಕ, ಕರುನಾಡು ಎಂಬುದು ಕೇವಲ ಬರೀ ನೆಲ ಮತ್ತು ಭಾಷೆಯಲ್ಲ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ. ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದು ಸಚಿವರು ಹೇಳಿದರು.
ಸಾಹಿತ್ಯ, ಸಂಸ್ಕೃತಿ, ಸಂಗೀತ, ಸದಭಿರುಚಿ, ಸಂಪ್ರದಾಯ, ಸಂಸ್ಕಾರ ಯಾವುದೇ ಕ್ಷೇತ್ರದಲ್ಲೂ ಕನ್ನಡಿಗರು ಕಡಿಮೆಯಿಲ್ಲ. ಇಂತಹ ಪವಿತ್ರ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು. ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಳ್ಳುತ್ತಿದ್ದು, ಹಲವು ‘ಗ್ಯಾರಂಟಿ ಯೋಜನೆ’ಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಜನರ ಮನ ಗೆದ್ದಿದೆ.
ಈ ಬಾರಿ ಮಡಿಕೇರಿ ದಸರಾಗೆ ತಲಾ ಒಂದೂವರೆ ಕೋಟಿ ರೂ. ಮತ್ತು ಗೋಣಿಕೊಪ್ಪ ದಸರಾಗೆ ಒಂದು ಕೋಟಿ ರೂ. ಸರ್ಕಾರ ಪ್ರಕಟಿಸಿರುವುದು ವಿಶೇಷವಾಗಿರುತ್ತದೆ. ತಲಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅಚ್ಚುಕಟ್ಟಾಗಿ ನಡೆದಿದ್ದು, ಸರ್ಕಾರದಿಂದ ರೂ. 75 ಲಕ್ಷಗಳ ಅನುದಾನ ಬಿಡುಗಡೆಯಾಗಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶಾಶ್ವತವಾಗಿ ರಂಗ ಮಂದಿರ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಈ ವರ್ಷ ದಸರಾ ಯಶಸ್ವಿಯಾಗಿ ಮುಗಿದಿದ್ದು, ಮುಂದಿನ ವರ್ಷ ದಸರಾಗೆ ಈಗಿನಿಂದಲೇ ಸಿದ್ಧತೆಗಳು ನಡೆಯಬೇಕಿದೆ ಎಂದು ಸಚಿವರು ತಿಳಿಸಿದರು.
ಶಾಸಕ ಡಾ.ಮಂಥರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಮಡಿಕೇರಿ ತಹಶೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪೊಲೀಸ್, ಎನ್ ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ತಂಡಗಳಿಂದ ಪಥಸಂಚಲನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.