ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ರಾಜ್ಯಗಳಲ್ಲಿ ಫೆಂಗಲ್ ಚಂಡಮಾರುತದ ಆರ್ಭಟ ಜೋರಾಗುತ್ತಿದೆ.
ಇದೀಗ ಹವಾಮಾನ ಇಲಾಖೆ ಪ್ರಮುಖ ಎಚ್ಚರಿಕೆಯೊಂದನ್ನು ನೀಡಿದೆ. ಈ ಮೂಲಕ ತಮಿಳುನಾಡಿನಲ್ಲಿ ನಾಳೆ (ಶನಿವಾರ) ವರುಣಾರ್ಭಟ ಜೋರಾಗಿರಲಿದೆ ಎಂದು ಎಚ್ಚರಿಸಿದೆ.
ಶನಿವಾರ ಮಧ್ಯದಲ್ಲಿ ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ತಮಿಳುನಾಡು ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ. ಇನ್ನು ಚಂಡಮಾರುತವು ಗಂಟೆಗೆ 70-80 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎನ್ನಲಾಗಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಕಳೆದ ಆರು ಗಂಟೆಗಳಲ್ಲಿ 13 ಕಿ.ಮೀ ವೇಗದಲ್ಲಿ ಚಂಡಮಾರುತವಾಗಿದೆ.ಉತ್ತರ ತಮಿಳುನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈ ಹವಾಮಾನ ಕೇಂದ್ರದ ನಿರ್ದೇಶಕ ಡಾ.ಎಸ್.ಬಾಲಚಂದ್ರನ್ ಎಚ್ಚರಿಕೆ ನೀಡಿದ್ದಾರೆ.
ಮುಂದಿನ ಸೂಚನೆ ಬರುವವರೆಗೂ ಮೀನುಗಾರರು ಬಂಗಾಳಕೊಲ್ಲಿಗೆ ತೆರಳದಂತೆ ಸೂಚಿನೆ ನೀಡಲಾಗಿದೆ. ತಮಿಳುನಾಡಿನಾದ್ಯಂತ ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ವಿಲುಪುರಂ, ಕಲ್ಲಕುರಿಚಿ ಮತ್ತು ಕಡಲೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪುದುಚೇರಿಯಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.