Monday, October 27, 2025

ಆಂಧ್ರ, ಒಡಿಶಾಕ್ಕೆ ಮೊಂಥಾ ಚಂಡಮಾರುತ ಎಂಟ್ರಿ: ಕರ್ನಾಟಕದಲ್ಲೂ ಭಾರೀ ಮಳೆಯ ನಿರೀಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯಾದ್ಯಂತ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದರೂ ಕಳೆದ ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಯಚೂರು ಸೇರಿ ಇತರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗು-ಮಿಂಚಿನ ಸಹಿತ ಮಳೆಯ ನಿರೀಕ್ಷೆ ಇದೆ.

error: Content is protected !!