ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ ಬಡ ಕುಟುಂಬವೊಂದರ ಆಸರೆಯಾಗಿದ್ದ ಗುಡಿಸಲು ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಗ್ರಾಮದ ನಿವಾಸಿ ಚಿತ್ರಲಿಂಗಪ್ಪ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ದುರ್ದೈವಿ ಮನೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಮನೆಗೆ ಆವರಿಸಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಬೆಲೆಬಾಳುವ ಚಿನ್ನಾಭರಣ ಹಾಗೂ ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ಅಗ್ನಿ ಜ್ವಾಲೆಗೆ ಬಲಿಯಾಗಿವೆ.
ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ತಹಶೀಲ್ದಾರ್ ರೇಹಾನ್ ಪಾಷ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬದ ನಷ್ಟದ ಬಗ್ಗೆ ಮಾಹಿತಿ ಪಡೆದ ಅವರು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ವಸ್ತುಗಳನ್ನು ಕಳೆದುಕೊಂಡ ಚಿತ್ರಲಿಂಗಪ್ಪ ಅವರ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದ್ದು, ಸರ್ಕಾರದ ನೆರವಿಗಾಗಿ ಕಾಯುತ್ತಿದೆ.



