ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ಭವಿಷ್ಯ ಇಂದು (ಜುಲೈ 22) ತೀರ್ಮಾನವಾಗುವ ಸಾಧ್ಯತೆ ಇದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ನ್ಯಾ. ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಮುಂದುವರಿಸಲಿದ್ದು, ಆರೋಪಿಗಳ ಪರ ವಾದಗಳನ್ನು ಇಂದು ಆಲಿಸುವ ನಿರೀಕ್ಷೆಯಿದೆ.
ಈ ಹಿಂದೆ ಸರ್ಕಾರ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡನೆ ಮಾಡಿದ್ದರು. ನಟ ದರ್ಶನ್ ಪರವಾಗಿಯೂ ಆರಂಭದಲ್ಲಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿಯವರನ್ನು ನೇಮಿಸಲಾಗಿದ್ದರೂ, ಅವರು ಈಗ ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಸರ್ಕಾರದ ಪರ ವಾದಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ.
ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳ ಪರಿಶೀಲನೆ ನಡೆಸಿದ ಪೀಠ, ಹಿಂದಿನ ವಿಚಾರಣೆಯಲ್ಲಿ ಹೈಕೋರ್ಟ್ ಜಾಮೀನು ನೀಡುವ ಸಂದರ್ಭದಲ್ಲಿ ಸೂಕ್ತವಾದ ವಿಚಾರಣೆ ನಡೆಸಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅಂತಿಮ ತೀರ್ಪು ಪ್ರಕಟಿಸುವ ಮುನ್ನ ಎಲ್ಲ ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಲು ನಿರ್ಧರಿಸಿದೆ.
ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ವಿಚಾರಣೆಯ ತೀರ್ಮಾನದ ಮೇಲೆ ದರ್ಶನ್ ಸೇರಿದಂತೆ ಉಳಿದ ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.