ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಪ್ರತಿಷ್ಠಿತ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸಮರ್ಥ್ ವಿರುದ್ಧ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ.
ಎರಡನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಒಟ್ಟು 9,134 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ 6,360 ಮತಗಳನ್ನು ಗಳಿಸಿದ್ದಾರೆ. ಇದರೊಂದಿಗೆ ಶ್ರೀನಿವಾಸ್ ಅವರು 2,707 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ದೀರ್ಘಕಾಲದವರೆಗೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಆರಂಭಿಕ ಹಿನ್ನಡೆ ಉಂಟಾಗಿರುವುದು ಕೈ ಪಾಳಯದಲ್ಲಿ ಆತಂಕ ಮೂಡಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರ ಮೊಮ್ಮಗ ಸಮರ್ಥ್ ಸ್ಪರ್ಧಿಸಿದ್ದು, ಅನುಕಂಪದ ಅಲೆ ಕೆಲಸ ಮಾಡಲಿದೆಯೇ ಅಥವಾ ಬದಲಾವಣೆಯ ಗಾಳಿ ಬೀಸಲಿದೆಯೇ ಎಂಬ ಕುತೂಹಲ ಮೂಡಿದೆ.



