ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ದಾವಣಗೆರೆ:
ಜಿಲ್ಲೆಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಲಾಯಿತು.
ಈಗಾಗಲೇ ರಾಜ್ಯ ಸರ್ಕಾರ ತನ್ನ ಸ್ಪಷ್ಟ ನಿರ್ಧಾರದೊಂದಿಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿದೆ. ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ರವರು ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಆದರೂ ಸಹ ದಾವಣಗರ ಜಿಲ್ಲೆಯಲ್ಲಿ ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಸರ್ಕಾರದ ಕಾನೂನಿಗೆ ಕವಡೆಕಾಸಿನ ಕಿಮ್ಮತ್ತಿಲ್ಲದಂತೆ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿವೆ ಎಂದು ಸಂಘಟನೆ ಮುಖಂಡರು ದೂರಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ನೂರಾರು ಗೋವುಗಳ ವಧೆ ಆಗುತ್ತಿದೆ. ತಕ್ಷಣವೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠರು ರಾಜ್ಯ ಸರ್ಕಾರದ ಕಾನೂನು ಪಾಲಿಸುವ ಮೂಲಕ ಅಕ್ರಮ ಕಸಾಯಿಖಾನೆಗಳನ್ನು ಸಂಪೂರ್ಣ ಬಂದ್ ಮಾಡಿಸಬೇಕು. ಇನ್ನು ೧೫ ದಿನಗಳಲ್ಲಿ ಜಿಲ್ಲೆಯಲ್ಲಿ ಗೋಹತ್ಯೆ ಸಂಪೂರ್ಣವಾಗಿ ನಿಲ್ಲಬೇಕು. ಇಲ್ಲವಾದಲ್ಲಿ ತೀವ್ರಸ್ವರೂಪದ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಹಿಂದೂ ಜಾಗರಣ ವೇದಿಕೆ ವಿಭಾಗ ಕಾರ್ಯದರ್ಶಿ ಸತೀಶ್ ಪೂಜಾರ್, ಮುಖಂಡರಾದ ಶಿವಾಜಿರಾವ್, ವಿಶ್ವನಾಥ್, ಗಣೇಶ್, ವೀರೇಶ್, ಚೇತನ್, ಅಚ್ಚುತ್, ಅಣ್ಣೇಶ್, ಸಂತೋಷ, ಮೃತ್ಯುಂಜಯ ಇತರರು ಹಾಜರಿದ್ದರು.