April 7, 2026
Tuesday, April 7, 2026
spot_img

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಗೌಜಿ ಗದ್ದಲದ ಬಹಿರಂಗ ಪ್ರಚಾರಕ್ಕೆ ಬಿತ್ತು ಅಧಿಕೃತ ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:


ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ.


ನಾಳೆ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಲು ಮಾತ್ರ ಅವಕಾಶವಿದ್ದು, ಇದೇ ಏಪ್ರಿಲ್ 9ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.


ದಾವಣಗೆರೆ ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳಿದ್ದು, ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ 234 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 50 ಮತಗಟ್ಟೆಗಳಿವೆ. ಇವುಗಳಲ್ಲಿ 76 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 2 ಲಕ್ಷದ 31 ಸಾವಿರ ಮತದಾರರಿದ್ದು, ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಮತಗಟ್ಟೆಯ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.


ಇನ್ನೊಂದೆಡೆ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ. ಈ ಉಪಚುನಾವಣೆಗಾಗಿ ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪ್ರತಿಯೊಂದು ಮತಗಟ್ಟೆಗೆ ಪ್ರಿಸೈಡಿಂಗ್ ಅಧಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಇಲ್ಲಿಯೂ ಎಲ್ಲಾ ಮತಗಟ್ಟೆಗಳಲ್ಲಿ ಪಾರದರ್ಶಕತೆಗಾಗಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮತದಾರರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರವಾಗಿ ಮತದಾನ ಮಾಡುವಂತೆ ಮನವಿ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !