ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಖಾಲಿಯಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಚುರುಕಾಗಿ ಸಿದ್ಧತೆ ಕೈಗೊಂಡಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮುಂದಿನ ಹಂತಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಜನವರಿ 3ರಂದು ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕಗೊಳಿಸಲಾಗುತ್ತದೆ. ಕರಡು ಪಟ್ಟಿಯ ಮೇಲಿನ ಆಕ್ಷೇಪಣೆಗಳು ಹಾಗೂ ತಿದ್ದುಪಡಿ ಅರ್ಜಿಗಳನ್ನು ಸಲ್ಲಿಸಲು ಜನವರಿ 24ರವರೆಗೆ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಪರಿಶೀಲನೆಗಳ ನಂತರ ಫೆಬ್ರವರಿ 14ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 217 ಮತಗಟ್ಟೆಗಳಿದ್ದು, ಸುಮಾರು 2 ಲಕ್ಷ 31 ಸಾವಿರಕ್ಕೂ ಹೆಚ್ಚು ಮತದಾರರು ನೋಂದಾಯಿತರಾಗಿದ್ದಾರೆ. ಮತದಾರರ ಪಟ್ಟಿ ಶುದ್ಧೀಕರಣ ಮತ್ತು ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಜಿಲ್ಲಾಡಳಿತ ಹಂತ ಹಂತವಾಗಿ ಕಾರ್ಯಯೋಜನೆ ರೂಪಿಸಿದೆ.

