ಕಾಂಗ್ರೆಸ್ ಸರ್ಕಾರದ ಹಗರಣಗಳ ಹಿಂದಿನ ಡಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ: ಕೆ.ಎಸ್.ನವೀನ್ ವಾಗ್ದಾಳಿ 

ಹೊಸದಿಗಂತ ವರದಿ, ಚಿತ್ರದುರ್ಗ :
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇರೆಯವರಿಂದ ರಾಜೀನಾಮೆ ಕೊಡಿಸುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಹಗರಣಗಳ ಹಿಂದಿನ ಡಾನ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಾಗ್ದಾಳಿ ನಡೆಸಿದರು.

ಚಿತ್ರದುರ್ಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣವು ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ. ಬದುಕಿನ ರೀತಿಯನ್ನು ತಿಳಿಸಿಕೊಟ್ಟಿದೆ. ಬಿ.ಎಸ್. ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರ ನೇತೃತ್ವ ಬಿಜೆಪಿ ಸರ್ಕಾರ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಜಾರಿಗೆ ತಂದು ಸರ್ಕಾರಿ ರಜೆ ಘೋಷಿಸಿತು ಎಂದರು.

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಸ್‌ಟಿ ಜನಾಂಗದವರಿಗೆ ತಮ್ಮದೇ ಕೊಡುಗೆ ನೀಡುತ್ತಾ ಬರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ. ಲೂಟಿ ಮಾಡಿದ್ದಾರೆ. ವಾಲ್ಮೀಕಿ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸ್ವಂತ ಬಳಕೆ ಮಾಡುವುದರ ಜೊತೆಗೆ ಬಳ್ಳಾರಿ ಲೋಕಸಭಾ ಚುನಾವಣೆ ಹಾಗೂ ತೆಲಂಗಾಣ ಚುನಾವಣೆಗೆ ಬಳಕೆ ಮಾಡಲಾಗಿದೆ. ಬಡವರ ಮನೆಯ ದೀಪ ಬೆಳಗಬೇಕಿದ್ದ ಹಣವನ್ನು ಮೋಜು ಮಸ್ತಿಗೆ ಬಳಸಲಾಗಿದೆ ಎಂದು ದೂರಿದರು.

ಸಿದ್ದರಾಮಯ್ಯ ಅಥವಾ ಈ ಸರ್ಕಾರಕ್ಕೆ ವಾಲ್ಮೀಕಿ ಜಯಂತಿ ಮಾಡುವ ನೈತಿಕತೆ ಇಲ್ಲ. ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಹಣವನ್ನು ದುರುಪಯೋಗ ಮಾಡಿಕೊಂಡಿರುವ  ಸಿದ್ದರಾಮಯ್ಯ ಹಾಗೂ ಸರ್ಕಾರ ಎಸ್‌ಟಿ ಜನಾಂಗದವರನ್ನು ಹಾಗೂ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು. ಸಿದ್ದರಾಮಯ್ಯ ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ದುಪ್ಪಟ್ಟು ಅನುದಾನ ನೀಡಬೇಕು. ಆ ಜನಾಂಗದ ಅಭಿವೃದ್ಧಿಗೆ ಶ್ರಮಿಸಬೇಕು. ಆದರೆ ಸರ್ಕಾರದ ಹಣದಲ್ಲಿ ವಾಲ್ಮೀಕಿ ಜಯಂತಿ ಜಾಹೀರಾತು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರರವರ ರಾಜೀನಾಮೆ ಪಡೆಯಲಾಯಿತು. ಮುಡ ಹಗರಣದಲ್ಲಿ ಸಿದ್ದರಾಮಯ್ಯನವರು ನೇರವಾಗಿ ಕಾರಣರಿದ್ದರೂ ಸಹ ಕೇವಲ ಅಧಿಕಾರಿಗಳನ್ನು ಮಾತ್ರ ಅಮಾನತ್ತುಗೊಳಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ೧೮೭ ಕೋಟಿ ಅಲ್ಲ ೮೯ ಕೋಟಿ ರೂ. ದುರುಪಯೋಗವಾಗಿದೆ ಎಂದು ಸದನದಲ್ಲಿ ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲಾ ಹಗರಣ ಮಾಡಿರೋ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ?. ಅವರಿಗೆ ನೈತಿಕತೆ ಇದ್ದಲ್ಲಿ ಇಂದೇ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

ನಗರದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ೩೦ ಎಕರೆ ಜಮೀನು ಬೇಕಾಗಿದೆ. ಅದನ್ನು ಜಿಲ್ಲಾಡಳಿತ ನೀಡಿದರೆ ನಮ್ಮ ನಾಯಕರಾದ ಅಮಿತ್ ಶಾರವರು ನೀಡಿದ ಭರವಸೆ ಈಡೇರಿಸಲಿದ್ದೇವೆ. ಪ್ರವಾಸೋದ್ಯಮ ಇಲಾಖೆಯ ಭೂಮಿ ಯಾರ ಒಡೆತನಕ್ಕೆ ಸೇರಿದೆ ಎಂಬುದು ಮಾಹಿತಿ ನೀಡುತ್ತಿಲ್ಲ. ತಿಮ್ಮಣ್ಣನಾಯಕನ ಕೆರೆಯ ಬಳಿ ಜಮೀನು ಸಿಗುತ್ತದೆ. ಅಲ್ಲಿ ಥೀಮ್ ಪಾರ್ಕ್ ನಿರ್ಮಿಸುವ ಕುರಿತು ಚರ್ಚೆ ನಡೆಯುತ್ತಿದೆ. ಕೂಡಲೇ ಈ ಕುರಿತು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಚಿ ಮಾಧುರಿ ಗಿರೀಶ್, ಎಸ್.ಟಿ. ಮೋರ್ಚ ಜಿಲ್ಲಾಧ್ಯಕ್ಷ ಶಿವಣ್ಣ, ರಾಜ್ಯ ಕಾರ್ಯಕಾರಿಣಿ ಮಾಜಿ ಸದಸ್ಯ ಪಾಪೇಶ್ ನಾಯಕ, ವಕ್ತಾರ ನಾಗರಾಜ್ ಬೇದ್ರೆ ಹಾಜರಿದ್ದರು.
- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!